ಬೆಂಗಳೂರು:ವಿವಾದಿತ ಗೋಹತ್ಯೆ ನಿಷೇಧ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಬುಧವಾರ ಅಂಗೀಕಾರ ದೊರೆತಿದೆ. ಈ ಬೆಳವಣಿಗೆ ಬೆನ್ನಲ್ಲೇ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಇಂದು ತುರ್ತು ಶಾಸಕಾಂಗ ಸಭೆ ಕರೆದಿದ್ದಾರೆ.
ಇಂದು ಬೆಳಗ್ಗೆ ವಿಧಾನಸೌಧದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ನಡೆಯಲಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನೀಡಿರುವ ಆದೇಶದ ಹಿನ್ನೆಲೆ ಶಾಸಕಾಂಗ ಪಕ್ಷದ ಕಾರ್ಯದರ್ಶಿ ಈ ತುಕಾರಾಂ ತುರ್ತು ಶಾಸಕಾಂಗ ಸಭೆ ಕರೆದಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.
ಕಾಂಗ್ರೆಸ್ ಸದಸ್ಯರ ಸಭಾತ್ಯಾಗದ ಮಧ್ಯೆಯೂ ಪರಿಷತ್ನಲ್ಲಿ ಎಪಿಎಂಸಿ ಮಸೂದೆ ಅಂಗೀಕಾರ
ಬೆಳಗ್ಗೆ 10.30ಕ್ಕೆ ವಿಧಾನಸೌಧದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಸಭೆ ನಡೆಯಲಿದೆ. ಎಲ್ಲಾ ಶಾಸಕರು ಸಭೆಯಲ್ಲಿ ಪಾಲ್ಗೊಳ್ಳುವಂತೆ ಅವರು ಪ್ರಕಟಣೆಯಲ್ಲಿ ಸೂಚಿಸಿದ್ದಾರೆ.
ಶಾಸಕಾಂಗ ಸಭೆಯ ಕಾಂಗ್ರೆಸ್ ಪತ್ರ ಅಜೆಂಡಾದಲ್ಲಿ ಮುಂಚಿತವಾಗಿ ತಿಳಿಸದೆ ವಿಧಾನಸಭೆಯಲ್ಲಿ ಏಕಾಏಕಿ ಗೋಹತ್ಯೆ ನಿಷೇಧ ವಿಧೇಯಕವನ್ನು ಪ್ರತಿಪಕ್ಷಗಳ ವಿರೋಧದ ನಡುವೆಯೇ ಮಂಡಿಸಿ ಅಂಗೀಕಾರ ಪಡೆಯಲಾಗಿದೆ. ಎಪಿಎಂಸಿ ತಿದ್ದುಪಡಿ ಕಾಯ್ದೆ, ಹಾಗೂ ಭೂ ಸುಧಾರಣಾ ಕಾಯ್ದೆ ಸೇರಿದಂತೆ ಹಲವು ಮಸೂದೆಗಳ ಬಗ್ಗೆ ಪ್ರತಿ ಪಕ್ಷಗಳನ್ನು ವಿಶ್ವಾಸಕ್ಕೆ ಪಡೆಯದೆ ದಬ್ಬಾಳಿಕೆಯ ರೀತಿ ರಾಜ್ಯ ಸರ್ಕಾರ ಬಲವಂತವಾಗಿ ಅನುಮೋದನೆ ಪಡೆದಿದೆ. ಈ ವಿಚಾರವಾಗಿ ಚರ್ಚಿಸಲು ಸಭೆ ಕರೆಯಲಾಗಿದೆ.
ನಾಳೆನ ಕಲಾಪವನ್ನು ಬಹಿಷ್ಕರಿಸಲು ಪ್ರತಿಪಕ್ಷ ಕಾಂಗ್ರೆಸ್ ನಿರ್ಧರಿಸಿದ್ದು, ಈ ಬಗ್ಗೆ ಶಾಸಕರಿಗೆ ಸಿದ್ದರಾಮಯ್ಯ ಮನದಟ್ಟು ಮಾಡಿಕೊಡಲಿದ್ದಾರೆ. ಹಲವು ತುರ್ತು ವಿಚಾರಗಳ ಚರ್ಚೆ ಇರುವ ಹಿನ್ನೆಲೆ ಈ ಮಹತ್ವದ ಶಾಸಕಾಂಗ ಸಭೆ ಕರೆಯಲಾಗಿದೆ.