ಬೆಂಗಳೂರು : ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಭಾರಿ ಬಹುಮತ ಪಡೆದು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್, ಈಗಾಗಲೇ ನಾಲ್ಕು ಗ್ಯಾರಂಟಿಗಳನ್ನು ಜಾರಿಗೆ ತಂದಿದೆ. ಸರ್ಕಾರ ರಚನೆಯಾಗಿ ನೂರು ದಿನಗಳನ್ನು ಪೂರೈಸಿದ ಬೆನ್ನಲ್ಲೇ ಮೂರು ಡಿಸಿಎಂ ಹುದ್ದೆ ಎಂಬ ವಿಚಾರ ಮುನ್ನಲೆಗೆ ಬಂದು, ಪಕ್ಷದ ಹೈಕಮಾಂಡ್ ಅಂಗಳಕ್ಕೂ ತಲುಪಿದೆ. ಈ ಹಿನ್ನೆಲೆಯಲ್ಲಿ ಸಚಿವರು, ಹಿರಿಯ ಕೈ ನಾಯಕರ ಹೇಳಿಕೆಯನ್ನು ಗಂಭೀರವಾಗಿ ತೆಗೆದುಕೊಂಡಿರುವ ಎಐಸಿಸಿ ರಾಜ್ಯದ ಕಾಂಗ್ರೆಸ್ ನಾಯಕರಿಗೆ ಖಡಕ್ ಎಚ್ಚರಿಕೆ ರವಾನಿಸಿದೆ.
ಹೆಚ್ಚಿನ ಡಿಸಿಎಂ ಹುದ್ದೆ ಸೃಷ್ಟಿಸುವಂತೆ ಕೋರಿ ಸಹಕಾರ ಸಚಿವ ಕೆ ಎನ್ ರಾಜಣ್ಣ, ಹಿರಿಯ ಶಾಸಕ ಬಸವರಾಜ ರಾಯರೆಡ್ಡಿ ಬಹಿರಂಗ ಹೇಳಿಕೆಗಳನ್ನು ಕಾಂಗ್ರೆಸ್ ವರಿಷ್ಠರು ಗಂಭೀರವಾಗಿ ತೆಗೆದುಕೊಂಡಿದ್ದಾರೆ. ಈ ಸಂಬಂಧ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಸ್ಪಷ್ಟನೆ ಹೊರಡಿಸಿದ್ದು, ಡಿಸಿಎಂ ಹುದ್ದೆ ಸೃಷ್ಟಿ ಕುರಿತ ಬಹಿರಂಗ ಹೇಳಿಕೆಗಳು ಒಪ್ಪುವಂತದಲ್ಲ ಹಾಗೂ ಅನಗತ್ಯ ಎಂದು ಖಡಕ್ ಸಂದೇಶ ನೀಡಿದ್ದಾರೆ.
ಇಂತಹ ವಿಚಾರಗಳನ್ನು ಪಕ್ಷದ ವೇದಿಕೆಯಲ್ಲಿ ಚರ್ಚಿಸಿ. ಬಹಿರಂಗವಾಗಿ ಹೇಳಿಕೆಗಳನ್ನು ನೀಡಬೇಡಿ. ಇಂತಹ ಹೇಳಿಕೆಗಳು ಪಕ್ಷದ ಹಿತಾಸಕ್ತಿಯ ವಿರುದ್ಧವಾಗಿದೆ. ಮತ್ತು ಇದರಿಂದ ಸರ್ಕಾರದ ಸುಗಮ ಆಡಳಿತಕ್ಕೆ ದಕ್ಕೆಯಾಗುತ್ತದೆ. ಹೀಗಾಗಿ ಈ ತರದ ಹೇಳಿಕೆಗಳನ್ನು ಒಪ್ಪುವುದಿಲ್ಲ. ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಇದನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.