ಬೆಂಗಳೂರು:ನಿಗದಿತ ಶೈಕ್ಷಣಿಕ ಅರ್ಹತೆ ಇಲ್ಲದಿದ್ದರೂ ಕಂದಾಯ ಸಚಿವ ಆರ್. ಅಶೋಕ್ ಸಂಬಂಧಿ ಎ. ರವಿ ಅವರನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರಕ್ಕೆ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ ಎಂದು ಆರೋಪಿಸಿ ಸಲ್ಲಿಸಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಹೈಕೋರ್ಟ್ ಸರ್ಕಾರಕ್ಕೆ ಕಡೆಯ ಅವಕಾಶ ನೀಡಿದೆ.
ಈ ಕುರಿತು ಆರ್ಟಿಐ ಕಾರ್ಯಕರ್ತ ಟಿ. ನರಸಿಂಹಮೂರ್ತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇಂದು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಎಸ್. ಉಮಾಪತಿ ವಾದಿಸಿ, ಕಳೆದ ಜುಲೈನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಕೋರ್ಟ್ ನವೆಂಬರ್ನಲ್ಲಿ ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಆದರೆ, ಈವರೆಗೆ ಸರ್ಕಾರ ಅರ್ಜಿಗೆ ಆಕ್ಷೇಪಣೆ ಸಲ್ಲಿಸಿಲ್ಲ, ಅನಗತ್ಯ ವಿಳಂಬ ಮಾಡುತ್ತಿದೆ ಎಂದರು.
ಇದಕ್ಕೆ ಪ್ರತಿಕ್ರಿಯಿಸಿದ ಸರ್ಕಾರದ ಪರ ವಕೀಲರು ಕಾರಣಾಂತರಗಳಿಂದ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ವಿಳಂಬವಾಗಿದೆ. ಹೀಗಾಗಿ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಎರಡು ವಾರ ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದರು. ಇದಕ್ಕೆ ಸಮ್ಮತಿಸಿದ ಪೀಠ, ಮಾ.30ರೊಳಗೆ ಅರ್ಜಿಗೆ ಆಕ್ಷೇಪಣೆ ಸಲ್ಲಿಸಬೇಕು. ಇದು ಕಡೆಯ ಅವಕಾಶ ಎಂದು ಸ್ಪಷ್ಟಪಡಿಸಿತು. ಅಲ್ಲದೇ, ನೇಮಕಾತಿ ಆದೇಶಕ್ಕೆ ಸಂಬಂಧಿಸಿದ ಕಡತವನ್ನು ಮುಂದಿನ ವಿಚಾರಣೆ ವೇಳೆ ಸಲ್ಲಿಸಬೇಕು ಎಂದು ನಿರ್ದೇಶಿಸಿ, ವಿಚಾರಣೆಯನ್ನು ಏ.12ಕ್ಕೆ ಮುಂದೂಡಿತು.