ಬೆಂಗಳೂರು: ವೀರಶೈವ ಸಮಾಜದಲ್ಲಿ ಮುಂದಿನ ದಿನಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಮಹಿಳಾ ಉದ್ಯಮಿಗಳನ್ನು ಗುರುತಿಸುವ ಕೆಲಸ ಮಾಡಲಾಗುತ್ತದೆ ಎಂದು ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ತಿಳಿಸಿದರು.
ಅಖಿಲ ಭಾರತ ವೀರಶೈವ ಮಹಾಸಭೆಯ ರಾಷ್ಟ್ರೀಯ ವಾಣಿಜ್ಯ ಮತ್ತು ಕೈಗಾರಿಕಾ ಸಮಿತಿಯಿಂದ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಮಹಿಳಾ ಉದ್ಯಮಿಗಳ ಸಮಿತಿ ಉದ್ಘಾಟಿಸಿ ಅವರು ಮಾಧ್ಯಮದೊಂದಿಗೆ ಮಾತನಾಡಿದರು. ಮುಂದಿನ ದಿನಗಳಲ್ಲಿ ಮಹಿಳಾ ಉದ್ಯಮಿಗಳ ಉತ್ತೇಜನಕ್ಕೆ ಅವಕಾಶ ಕಲ್ಪಿಸಿ ಕೊಡುವುದಾಗಿ ಅವರು ಭರವಸೆ ನೀಡಿದರು.
ಮಹಾಸಭಾದ ರಾಷ್ಟ್ರೀಯ ಮಹಿಳಾ ಘಟಕದ ಅಧ್ಯಕ್ಷೆ ಮಧುರಾ ಅಶೋಕ್ ಕುಮಾರ್ ಈಟಿವಿ ಭಾರತದ ಜೊತೆ ಮಾತನಾಡಿ, ಗೃಹ ಕೈಗಾರಿಕಾ, ಉದ್ಯೋಗ, ಕರಕುಶಲ, ಬ್ಯುಟೀಶಿಯನ್ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಸಮಾಜದ ಮಹಿಳೆಯರು ತೊಡಗಿಸಿಕೊಂಡಿದ್ದಾರೆ. ಅವರಿಗೆ ಉತ್ತೇಜನ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.