ಬೆಂಗಳೂರು:ದೇವರಾಯನ ದುರ್ಗ ಮೀಸಲು ಅರಣ್ಯ ಪ್ರದೇಶದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವ ಜಮೀನು ತೆರವುಗೊಳಿಸಿ ಅರಣ್ಯ ಇಲಾಖೆಯ ಸುಪರ್ದಿಗೆ ತೆಗೆದುಕೊಳ್ಳಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ತುಮಕೂರು ತಾಲೂಕು ಬೆಳ್ಳಾವಿ ಹೋಬಳಿ ವಕ್ಕೋಡಿ ಗ್ರಾಮದ ಮಾರಣ್ಣ ಪಾಳೆಗಾರ ಎಂಬವರು ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ.ವರಾಲೆ ಹಾಗೂ ನ್ಯಾ.ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.
ಅರಣ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ, ತುಮಕೂರು ಜಿಲ್ಲಾಧಿಕಾರಿ, ತುಮಕೂರು ತಹಶೀಲ್ದಾರ್, ತುಮಕೂರು ಭೂ ದಾಖಲೆಗಳ ಸಹಾಯಕ ನಿರ್ದೇಶಕ, ರಾಜ್ಯ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ, ತುಮಕೂರು ವಲಯದ ಉಪ ಅರಣ್ಯ ಸಂರಕ್ಷಣಾಧಿಕಾರಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯಾಧಿಕಾರಿ, ಅರಣ್ಯ ಜಮೀನು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿರುವ ಖಾಸಗಿ ವ್ಯಕ್ತಿ ವಡ್ಡರಹಳ್ಳಿ ನಿವಾಸಿ ಜೆ. ಶ್ವೇತಾಕುಮಾರಿ ಅವರಿಗೆ ನೋಟಿಸ್ ಜಾರಿಗೆ ಆದೇಶಿಸಿ, ನಾಲ್ಕು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸಲು ಎಲ್ಲಾ ಪ್ರತಿವಾದಿಗಳಿಗೆ ನಿರ್ದೇಶಿಸಿದೆ. ಮುಂದಿನ ವಿಚಾರಣೆಯನ್ನು ಡಿ.6ಕ್ಕೆ ಮುಂದೂಡಿದೆ.