ಬೆಂಗಳೂರು:ರಾಜ್ಯದ ವಿವಿಧೆಡೆ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಪ್ರಧಾನ ಕಚೇರಿ ಮೇಲೆಯೂ ದಾಳಿ ನಡೆದಿದೆ. ಕುಮಾರಕೃಪ ರಸ್ತೆಯಲ್ಲಿರುವ ಬಿಡಿಎ ಕಚೇರಿ ಆರು ತಂಡಗಳಿಂದ 35 ಮಂದಿ ಅಧಿಕಾರಿ ಹಾಗೂ ಸಿಬ್ಬಂದಿ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ ನ್ಯಾಯಮೂರ್ತಿ ಬಿ ಎಸ್ ಪಾಟೀಲ್ ಅವರ ನೇತೃತ್ವದಲ್ಲಿ ದಾಳಿ ನಡೆದಿದ್ದು, ಎಂಜಿನಿಯರಿಂಗ್ ವಿಭಾಗ, ನಗರ ಯೋಜನಾ ವಿಭಾಗ, ಭೂ ಪರಿಹಾರ ವಿಭಾಗ ಸೇರಿದಂತೆ ನಾಲ್ಕು ವಿಭಾಗಗಳಲ್ಲಿ ಅಧಿಕಾರಿಗಳು ಪರಿಶೀಲನೆ ಕೈಗೊಂಡಿದ್ದಾರೆ. ಅಲ್ಲದೆ, ಲೋಕಾಯುಕ್ತ ಐಜಿ ಸುಬ್ರಮಣ್ಯೇಶ್ವರ ರಾವ್ ಸೇರಿದಂತೆ ಹಿರಿಯ ಅಧಿಕಾರಿಗಳು ಬಿಡಿಎ ಕಚೇರಿಗೆ ಭೇಟಿ ನೀಡಿದ್ದಾರೆ.
ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಅವರರು, ಬಿಡಿಎ ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ತನಿಖೆ ನಡೆಯುತ್ತಿದೆ. ಹಲವು ದೂರುಗಳು ಬಂದ ಹಿನ್ನೆಲೆಯಲ್ಲಿ ನಮ್ಮ ತಂಡದಿಂದ ದಾಳಿ ನಡೆದಿದೆ. ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಸದ್ಯ ದಾಖಲೆ ಪರಿಶೀಲನೆ ನಡೆಯುತ್ತಿದೆ. ಪೂರ್ಣಗೊಂಡ ಬಳಿಕ ಈ ಬಗ್ಗೆ ವಿಸ್ತೃತ ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.
ಆದಾಯಕ್ಕೂ ಅಧಿಕ ಆಸ್ತಿ ಸಂಗ್ರಹ ಆರೋಪದಡಿ ಮೊಟ್ಟ ಮೊದಲ ಪ್ರಕರಣ ದಾಖಲಿಸಿಕೊಂಡ ಲೋಕಾಯುಕ್ತ ಅಧಿಕಾರಿಗಳು ಆರೋಪಿ ಅಧಿಕಾರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಶುಕ್ರವಾರ ಬೆಳಗ್ಗೆ ದಾಳಿ ನಡೆಸಿದ್ದರು. ಕೋಲಾರ ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ವೆಂಕಟೇಶ್. ಜಿ ವಿರುದ್ಧ ಆದಾಯಕ್ಕೂ ಅಧಿಕ ಆಸ್ತಿ ಗಳಿಕೆ ಆರೋಪ ಕೇಳಿ ಬಂದಿತ್ತು. ಪ್ರಕರಣ ದಾಖಲಿಸಿಕೊಂಡ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ರಾಮನಗರ, ಕೋಲಾರ, ಬೆಂಗಳೂರು ಸೇರಿದಂತೆ ವೆಂಕಟೇಶ್ ಅವರಿಗೆ ಸಂಬಂಧಿಸಿದ 8 ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ರಾಮನಗರದ ಮಾಗಡಿ - ರಾಮನಗರ ರಸ್ತೆಯಲ್ಲಿರುವ ಗುಡ್ಡಹಳ್ಳಿಯ ಚೇತನ್ ಫಾರ್ಮ್ ಹೌಸ್ ಮೇಲೆ ದಾಳಿ ನಡೆದಿದೆ. ಲೋಕಾಯುಕ್ತ ಸಿಪಿಐ ಸತೀಶ್ ನೇತೃತ್ವದಲ್ಲಿ ದಾಳಿ ನಡೆದಿದ್ದು, 6ಕ್ಕೂ ಹೆಚ್ಚು ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಗಳು ಫಾರಂ ಹೌಸ್ನಲ್ಲಿ ಬೆಲೆಬಾಳುವ ಮರಗಳು, ಮನೆ ಮೌಲ್ಯ ಸೇರಿದಂತೆ ಆಸ್ತಿ ಪತ್ರ ದಾಖಲಾತಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ:ಲಂಚಕ್ಕೆ ಬೇಡಿಕೆ: ಬಳ್ಳಾರಿಯಲ್ಲಿ ಇಬ್ಬರು ಸರ್ವೇಯರ್ ಲೋಕಾಯುಕ್ತ ಬಲೆಗೆ