ಬೆಂಗಳೂರು:ಭ್ರಷ್ಟಾಚಾರ ಆರೋಪದಡಿ ನನ್ನ ವಿರುದ್ಧ ಫೈಟರ್ ರವಿ ದಾಖಲಿಸಿರುವ ಕ್ರಿಮಿನಲ್ ಪ್ರಕರಣ ರದ್ದು ಮಾಡುವಂತೆ ಕೋರಿ ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ನ್ಯಾಯಪೀಠ ಫೈಟರ್ ರವಿಗೆ ನೋಟಿಸ್ ಜಾರಿ ಮಾಡಿದೆ.
ವಿಚಾರಣೆಯಲ್ಲಿ ಅಲೋಕ್ ಕುಮಾರ್ ಪರ ವಾದ ಮಂಡಿಸಿದ ಹಿರಿಯ ವಕೀಲ ಸಂದೇಶ್ ಜೆ.ಚೌಟ, ಅರ್ಜಿದಾರರ ವಿರುದ್ಧದ ಆರೋಪಕ್ಕೆ ಯಾವುದೇ ಸಾಕ್ಷ್ಯಗಳಿಲ್ಲ. ತನಿಖಾಧಿಕಾರಿಗಳು ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿರುವ ಅಂತಿಮ ವರದಿಯಲ್ಲಿ ಬಿ ರಿಪೋರ್ಟ್ ಎಂದು ನಮೂದಾಗಿದೆ. ಆದರೆ, ವಿಶೇಷ ನ್ಯಾಯಾಲಯ ಕೇವಲ ಫಿರ್ಯಾದುದಾರನ ದೂರು ಮತ್ತು ಪ್ರತಿಭಟನಾ ಅರ್ಜಿ ಆಧರಿಸಿ ಸಂಜ್ಞೆಯ ಅಪರಾಧದಡಿ ವಿಚಾರಣೆಗೆ ಮುಂದಾಗಿದೆ. ಆದ್ದರಿಂದ, ಪ್ರಕರಣವನ್ನು ರದ್ದುಗೊಳಿಸಬೇಕು ಎಂದು ಕೋರಿದರು. ವಾದ ಆಲಿಸಿದ ನ್ಯಾಯಪೀಠ ಪ್ರತಿವಾದಿ ಬಿ.ಎಂ.ಮಲ್ಲಿಕಾರ್ಜುನ ಅಲಿಯಾಸ್ ರವಿ ಯಾನೆ ಫೈಟರ್ ರವಿ (44) ಬಿನ್ ಎನ್.ಮಲ್ಲಯ್ಯಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆ ಮುಂದೂಡಿದೆ.
ಪ್ರಕರಣವೇನು?: ಫೈಟರ್ ರವಿ ವಿರುದ್ಧ ವೈಯ್ಯಾಲಿ ಕಾವಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2014ರಲ್ಲಿ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣಗಳನ್ನು ಕೈಬಿಡಲು ಆಗಿನ ಉತ್ತರ ವಲಯದ ಜಂಟಿ ಪೊಲೀಸ್ ಆಯುಕ್ತರಾಗಿದ್ದ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ 1 ಕೋಟಿ ರೂ ಲಂಚಕ್ಕೆ ಬೇಡಿಕೆ ಇರಿಸಿದ್ದರು ಎಂಬುದು ಆರೋಪ. ಈ ಸಂಬಂಧ ರವಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ದೂರು ಆಧರಿಸಿ ಲೋಕಾಯುಕ್ತ ಪೊಲೀಸರು ಭ್ರಷ್ಟಾಚಾರ ನಿಗ್ರಹ ಕಾಯ್ದೆ– ಕಲಂ 7,13 (ಡಿ) ಮತ್ತು 13 (2)ರ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದರು.