ಬೆಂಗಳೂರು: ರಾಜ್ಯ ಬಿಜೆಪಿ ಕೋರ್ ಕಮಿಟಿ ವಿಶೇಷ ಸಭೆ ನಂತರ ಅಮಿತ್ ಶಾ ಆಯ್ದ ನಾಯಕರ ಜೊತೆ ಪ್ರತ್ಯೇಕ ಸಭೆ ನಡೆಸಿದ್ದಾರೆ.
ಸಿಎಂ ಬಿ.ಎಸ್.ಯಡಿಯೂರಪ್ಪ ನಿರ್ಗಮನದ ನಂತರ ಸಭೆ ನಡೆದಿರುವುದು ಕುತೂಹಲ ಮೂಡಿಸಿದೆ. ನಗರದ ಖಾಸಗಿ ಹೋಟೆಲ್ ನಲ್ಲಿ ಶನಿವಾರ ತಡರಾತ್ರಿವರೆಗೂ ರಾಜಕೀಯ ಚಟುವಟಿಕೆ ನಡೆದವು. ತಡವಾಗಿ ಆರಂಭಗೊಂಡ ಬಿಜೆಪಿ ಕೋರ್ ಕಮಿಟಿ ಸಭೆ ಒಂದು ಗಂಟೆ ಕಾಲ ನಡೆಯಿತು. ಸಭೆ ಮುಗಿಯುತ್ತಿದ್ದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್.ಅಶೋಕ್ ನಿರ್ಗಮಿಸಿದರು.
ಸಿಎಂ ನಿರ್ಗಮನದ ನಂತರ ಅಮಿತ್ ಶಾ ತಮ್ಮ ಕೊಠಡಿಯಲ್ಲಿ ನಾಲ್ವರು ಬಿಜೆಪಿ ನಾಯಕರೊಂದಿಗೆ ಪ್ರತ್ಯೇಕ ಸಭೆ ನಡೆಸಿದರು. ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ್.ಎಲ್ ಸಂತೋಷ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರೊಂದಿಗೆ ಕೆಲಕಾಲ ಸಮಾಲೋಚನೆ ನಡೆಸಿ ರಾಜ್ಯ ರಾಜಕೀಯ ವಿದ್ಯಮಾನಗಳ ಕುರಿತು ಮಾಹಿತಿ ಕಲೆಹಾಕಿದರು.
ಸಂಪುಟ ಪುನಾರಚನೆ ನಂತರ ರಾಜ್ಯದಲ್ಲಿ ವ್ಯಾಪಕ ಚರ್ಚೆ ನಡೆಯಿತ್ತಿರುವ ಸಿ.ಡಿ ವಿವಾದ ಕುರಿತ ಮಾಹಿತಿ ಪಡೆದುಕೊಂಡಿದ್ದಾರೆ ಎನ್ನಲಾಗುತ್ತಿದೆ. ಸಿಎಂ ಯಡಿಯೂರಪ್ಪ ಅವರಿಗೆ ಸಂಬಂಧಿಸಿದ ಸಿ.ಡಿ ಎನ್ನಲಾಗುತ್ತಿರುವ ಕಾರಣ ಸಿ ಎಂ ನಿರ್ಗಮನದ ನಂತರ ಈ ಕುರಿತು ಪ್ರತ್ಯೇಕ ಸಭೆ ನಡೆಸಲಾಯಿತು ಎನ್ನಲಾಗಿದೆ.
ಇಮೇಜ್ ಹೆಚ್ಚಿಸುವ ಕೆಲಸ ಮಾಡಿ:
ರಾಜ್ಯ ಬಿಜೆಪಿ ಸರ್ಕಾರಕ್ಕೆ ಉತ್ತಮ ಇಮೇಜ್ ಬಂದಿದೆ. ಆದರೂ ಸರ್ಕಾರದ ಇಮೇಜ್ ಅನ್ನು ಮತ್ತಷ್ಟು ಹೆಚ್ಚಿಸುವಂತೆ ಕೋರ್ ಕಮಿಟಿ ಸಭೆಯಲ್ಲಿ ಪಕ್ಷದ ನಾಯಕರಿಗೆ ಅಮಿತ್ ಶಾ ಸೂಚನೆ ನೀಡಿದ್ದಾರೆ. ಇಮೇಜ್ ಹೆಚ್ಚಿಸುವ ಮತ್ತಷ್ಟು ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕು ಇಂತಹ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವಂತೆ ಕಾರ್ಯಪ್ರವೃತ್ತರಾಗಬೇಕು ಎಂದು ಸೂಚನೆ ನೀಡಿದ್ದಾರೆ.
ಮುಂಬರುವ ಎಲ್ಲಾ ಚುನಾವಣೆಗಳನ್ನು ಗಂಭೀರವಾಗಿ ಪರಿಗಣಿಸಬೇಕು, ಅಭ್ಯರ್ಥಿ ಯಾರಾದರೂ ಗೆಲ್ಲಿಸಿಕೊಂಡು ಬರಬೇಕು. ಗ್ರಾಮ ಪಂಚಾಯಿತಿ ಚುನಾವಣೆ ರೀತಿಯಲ್ಲೇ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆ ಗೆಲ್ಲಬೇಕು ಎಂದು ಕೋರ್ ಕಮಿಟಿ ಸಭೆಯಲ್ಲಿ ಅಮಿತ್ ಶಾ ಸೂಚನೆ ನೀಡಿದ್ದಾರೆ.