ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಲ್ಲಿರುವ ಅಮೃತಮಹಲ್ ಹುಲ್ಲುಗಾವಲು ಪ್ರದೇಶದಲ್ಲಿ ನಾಲೆ ನಿರ್ಮಿಸುತ್ತಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಅಮೃತಮಹಲ್ ಹುಲ್ಲುಗಾವಲಿನಲ್ಲಿ ಕಾಮಗಾರಿ : ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಅಮೃತಮಹಲ್ ಹುಲ್ಲುಗಾವಲಿನಲ್ಲಿ ನಡೆಯುತ್ತಿರುವ ನಾಲೆ ಕಾಮಗಾರಿ ಕುರಿತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ನೀಡಿದೆ.
ಸಂರಕ್ಷಿತ ಹುಲ್ಲುಗಾವಲು ಪ್ರದೇಶದಲ್ಲಿ ನೀರಾವರಿ ಯೋಜನೆಗಾಗಿ ಕಾಮಗಾರಿ ನಡೆಸುತ್ತಿರುವುದನ್ನ ಪ್ರಶ್ನಿಸಿ ಡಿವಿ ಗಿರೀಶ್ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಕೆಲಕಾಲ ಅರ್ಜಿದಾರರ ವಾದ ಆಲಿಸಿದ ಪೀಠ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಆಗಸ್ಟ್ 17ಕ್ಕೆ ಮುಂದೂಡಿತು.
ವನ್ಯಜೀವಿಗಳ ತಾಣವಾಗಿರುವ ಅಮೃತಮಹಲ್ ಹುಲ್ಲುಗಾವಲು ಪ್ರದೇಶವನ್ನು ಸಂರಕ್ಷಿತ ಪ್ರದೇಶ ಎಂದು ಈಗಾಗಲೇ ಸರ್ಕಾರ ಘೋಷಿಸಿದೆ. ಹಾಗಿದ್ರೂ ತುಂಗಾ ನದಿ ಮತ್ತು ಭದ್ರಾ ಜಲಾಶಯದಿಂದ ಚಿಕ್ಕಮಗಳೂರು ಚಿತ್ರದುರ್ಗ, ತುಮಕೂರು ಮತ್ತು ದಾವಣಗೆರೆ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸುವ ಯೋಜನೆ ನಾಲೆ ನಿರ್ಮಿಸಲು ಅನುಮತಿ ನೀಡಲಾಗಿದೆ. ಸರ್ಕಾರದ ಈ ಕ್ರಮ ವನ್ಯಜೀವಿ ರಕ್ಷಣಾ ಕಾಯ್ದೆ ಮತ್ತು ಅರಣ್ಯ ಸಂರಕ್ಷಣಾ ಕಾಯ್ದೆಗಳಿಗೆ ವಿರುದ್ಧವಾಗಿದೆ. ಆದ್ದರಿಂದ ಯೋಜನೆಗೆ ತಡೆ ನೀಡಬೇಕು ಎಂದು ಅರ್ಜಿದಾರರು ಕೋರಿದ್ದಾರೆ.