ಬೆಂಗಳೂರು : ಬೆಲೆ ಕುಸಿತದಿಂದ ತೆಂಗು ಮತ್ತು ಕೊಬ್ಬರಿ ಬೆಳೆಗಾರರು ತೀವ್ರ ಸಂಕಷ್ಟದಲ್ಲಿದ್ದು, ರಾಜ್ಯ ಸರ್ಕಾರ ತಕ್ಷಣ 3 ಸಾವಿರ ರೂ. ಕನಿಷ್ಠ ಬೆಂಬಲ ಬೆಲೆ ಘೋಷಣೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ವಿಧಾನಸಭೆಯ ಕಲಾಪದಲ್ಲಿ ನಿಯಮ 69ರ ಚರ್ಚೆ ಯಲ್ಲಿ ತೆಂಗು ಮತ್ತು ಕೊಬ್ಬರಿ ಬೆಳೆಗಾರರು ತೀವ್ರ ಸಂಕಷ್ಟದಲ್ಲಿರುವುದರಿಂದ ಹಾಗೂ ಕನಿಷ್ಠ ಬೆಂಬಲ ಬೆಲೆಯೂ ಸಹ ಕಡಿಮೆಯಾಗುತ್ತಿರುವುದರಿಂದ ಬೆಂಬಲ ಬೆಲೆ ಹೆಚ್ಚಿಸುವ ಬಗ್ಗೆ ನಡೆದ ಚರ್ಚೆಯಲ್ಲಿ ಮಾತನಾಡಿದರು.
ಈಗಾಗಲೇ ಕೇಂದ್ರ ಸರ್ಕಾರ ಪ್ರತಿ ಕಿಂಟ್ವಾಲ್‌ಗೆ 11,750 ರೂ. ಎಂಎಸ್‌ಪಿ ದರ ನಿಗದಿಗೊಳಿಸಿದೆ. ರಾಜ್ಯ ಸರ್ಕಾರ ಸಹ ರೈತರ ಹಿತ ಕಾಪಾಡಲು ಮೂರು ಸಾವಿರ ರೂ. ಬೆಂಬಲ ಬೆಲೆ ಘೋಷಣೆ ಮಾಡಬೇಕು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸರ್ಕಾರ ರಚನೆಯಾದ ತಕ್ಷಣ 15 ಸಾವಿರ ರೂ. ಬೆಂಬಲ ಬೆಲೆ ನೀಡುವುದಾಗಿ ಅಶ್ವಾಸನೆ ನೀಡಿದ್ದರು. ಅದರಂತೆ ಈಗ ನಡೆದುಕೊಳ್ಳಬೇಕು ಎಂದು ಕುಮಾರಸ್ವಾಮಿ ಒತ್ತಾಯಿಸಿದರು.
ಬೆಂಗಳೂರು-ಮೈಸೂರು ರಸ್ತೆಯಲ್ಲಿ ಸಾವಿರಾರು ಎಕರೆಯಲ್ಲಿ ತೆಂಗಿನ ಬೆಳೆಗಳು ನಾಶವಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯದಲ್ಲಿ ಏಳು ಜಿಲ್ಲೆಗಳಿಗಿಂತ ಹೆಚ್ಚಿನ ಜಿಲ್ಲೆಯಲ್ಲಿ ತೆಂಗು ಬೆಳೆಗಾರರು ಸಂಕಷ್ಟಕ್ಕೊಳಗಾಗಿದ್ದಾರೆ. ಡಿಸೆಂಬರ್-ಜನವರಿ ತಿಂಗಳಿಂದ ಕೊಬ್ಬರಿ ಬೆಲೆ ಕುಸಿತಗೊಂಡಿದೆ. ತಾಳೆಎಣ್ಣೆ ಕಡಿಮೆ ಬೆಲೆ ಲಭ್ಯವಾಗುತ್ತಿರುವುದು ಮತ್ತು ಹೊರದೇಶದಿಂದ ಆಮದು ಮಾಡಿಕೊಳ್ಳುತ್ತಿರುವ ಕಾರಣ ಕೊಬ್ಬರಿಗೆ ಬೇಡಿಕೆ ಕಡಿಮೆಯಾಗಿದೆ. ಆಮದು ನೀತಿಯಿಂದಲೂ ತೆಂಗು ಬೆಳೆಗಾರರಿಗೆ ಸಮಸ್ಯೆಯಾಗಿದೆ. ರಾಜ್ಯದ ಕೊಬ್ಬರಿ ವಿದೇಶಗಳಿಗೆ ರಫ್ತು ಆಗುತ್ತಿದೆ. ಮಹಾರಾಷ್ಟ್ರ ಮತ್ತು ಉತ್ತರಭಾರತದ ಹಲವು ರಾಜ್ಯಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕೊಬ್ಬರಿ ಮಾರಾಟವಾಗುತ್ತದೆ. ಆದರೆ, ಸದ್ಯಕ್ಕೆ ಹಿನ್ನಡೆಯಾಗಿರುವ ಹಿನ್ನೆಲೆಯಲ್ಲಿ ಬೆಲೆ ಇಳಿಕೆಯಾಗಿದೆ ಎಂದು ಮಾಜಿ ಸಿಎಂ ಹೆಚ್ಡಿಕೆ ಹೇಳಿದರು.