ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಕುಟುಂಬ ಸದಸ್ಯರು ಅಕ್ರಮಗಳಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ವರದಿ ಮಾಡಿದ್ದಕ್ಕೆ ಪ್ರತಿಯಾಗಿ ಡೆವಲಪರ್ ಓರ್ವ ದಾಖಲಿಸಿದ್ದ ಕ್ರಿಮಿನಲ್ ಪ್ರಕರಣದಲ್ಲಿ ಬಂಧನದ ಭೀತಿ ಎದುರಿಸುತ್ತಿದ್ದು, ಖಾಸಗಿ ಸುದ್ದಿ ವಾಹಿನಿಯ ಎಂಡಿ ರಾಕೇಶ್ ಶೆಟ್ಟಿ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ನೀಡುವಂತೆ ಕೋರಿ ರಾಕೇಶ್ ಶೆಟ್ಟಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಎ ಪಾಟೀಲ್ ಅವರಿದ್ದ ಏಕಸದಸ್ಯ ಪೀಠ, ಮನವಿಯನ್ನು ಷರತ್ತು ಬದ್ಧವಾಗಿ ಪುರಸ್ಕರಿಸಿದೆ. ಅರ್ಜಿದಾರ ₹2 ಲಕ್ಷ ಮೊತ್ತದ ವೈಯಕ್ತಿಕ ಬಾಂಡ್ ಸಲ್ಲಿಸಬೇಕು. ಇಬ್ಬರು ವ್ಯಕ್ತಿಗಳ ಭದ್ರತಾ ಖಾತರಿ ಒದಗಿಸಬೇಕು.
ಮುಂದಿನ 20 ದಿನಗಳಲ್ಲಿ ತನಿಖಾಧಿಕಾರಿ ಎದುರು ಹಾಜರಾಗಬೇಕು ಮತ್ತು ತನಿಖೆಗೆ ಸಹಕರಿಸಬೇಕು. ಸಾಕ್ಷ್ಯಗಳನ್ನು ನಾಶಪಡಿಸಬಾರದು ಅಥವಾ ಅವುಗಳ ಮೇಲೆ ಪ್ರಭಾವ ಬೀರಬಾರದು ಎಂಬ ಷರತ್ತುಗಳನ್ನು ವಿಧಿಸಿ ರಾಕೇಶ್ ಶೆಟ್ಟಿ ಅವರಿಗೆ ನಿರೀಕ್ಷಣಾ ಜಾಮೀನು ನೀಡಿದೆ.
ಅರ್ಜಿದಾರ ರಾಕೇಶ್ ಶೆಟ್ಟಿ ಪರ ಹಿರಿಯ ವಕೀಲರಾದ ಪ್ರೊ. ರವಿವರ್ಮ ಕುಮಾರ್ ಹಾಗೂ ಎ.ಎಸ್. ಪೊನ್ನಣ್ಣ ಅವರು ವಾದ ಮಂಡಿಸಿದ್ದರು.