ಬೆಂಗಳೂರು :ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಯುವತಿಯನ್ನು ಬಂಧಿಸದಂತೆ ಎಸ್ಐಟಿಗೆ ನಿರ್ದೇಶಿಸಬೇಕು ಎಂದು ಮಾಡಿರುವ ಮನವಿಯನ್ನು ಪುರಸ್ಕರಿಸಲು ಹೈಕೋರ್ಟ್ ನಿರಾಕರಿಸಿದೆ. ತನ್ನನ್ನು ರಾಜಕೀಯವಾಗಿ ಮುಗಿಸಲು ಆರೋಪಿತರು ನಕಲಿ ಸಿಡಿ ಸೃಷ್ಟಿಸಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಆರೋಪಿಸಿ ರಮೇಶ್ ಜಾರಕಿಹೊಳಿ ಸದಾಶಿವನಗರ ಠಾಣೆಯಲ್ಲಿ ದಾಖಲಿಸಿರುವ ಎಫ್ಐಆರ್ ರದ್ದು ಕೋರಿ ಯುವತಿ ಸಲ್ಲಿಸಿರುವ ಅರ್ಜಿಯನ್ನು ನ್ಯಾ. ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ಪೀಠ ಇಂದು ವಿಚಾರಣೆ ನಡೆಸಿತು.
ಈ ವೇಳೆ ಯುವತಿ ಪರ ವಕೀಲ ಸಂಕೇತ್ ಏಣಗಿ ವಾದ ಮಂಡಿಸಿ, ರಮೇಶ್ ಜಾರಕಿಹೊಳಿ ದಾಖಲಿಸಿರುವ ದೂರಿನ ಸಂಬಂಧ ತನಿಖೆ ನಡೆಸುತ್ತಿರುವ ಎಸ್ಐಟಿ ಪೊಲೀಸರು ಅರ್ಜಿದಾರ ಯುವತಿಯನ್ನು ಬಂಧಿಸುವ ಸಾಧ್ಯತೆ ಇದೆ. ಇದರಿಂದ ಯುವತಿ ಬಂಧನ ಭೀತಿಯಲ್ಲಿದ್ದಾರೆ. ಇನ್ನು, ಯುವತಿ ನೀಡಿದ ದೂರಿನಡಿ ರಮೇಶ್ ಜಾರಕಿಹೊಳಿ ಬಂಧಿಸಿಲ್ಲ. ಆದ್ದರಿಂದ ಯುವತಿಯನ್ನು ಬಂಧಿಸದಂತೆ ಎಸ್ಐಟಿಗೆ ನಿರ್ದೇಶಿಸಬೇಕು ಎಂದು ಕೋರಿದರು.