ಬೆಂಗಳೂರು:2023ರಲ್ಲಿ ರಾಜ್ಯ ವಿಧಾನಸಭಾ ಚುನಾವಣೆ ನಡೆಸದೆ, ಎಲ್ಲಾ ರಾಜಕೀಯ ಪಕ್ಷಗಳಿಂದ ಪ್ರತಿನಿಧಿಸುವ ಜನಪ್ರತಿನಿಧಿಗಳನ್ನು ನೇರವಾಗಿ ಆಯ್ಕೆ ಮಾಡಲು ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಆದೇಶಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಕುರಿತು ಬೆಂಗಳೂರಿನ ಲ್ಯಾವೆಲ್ಲಿ ರಸ್ತೆಯ ನಿವಾಸಿ ಮುರಳಿ ಕೃಷ್ಣ ಬ್ರಹ್ಮಾನಂದಂ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರ ನೇತೃತ್ವದ ವಿಭಾಗೀಯ ಪೀಠ, ಈ ಆದೇಶ ನೀಡಿದೆ.
ಜನಪ್ರತಿನಿಧಿಗಳ ಕಾಯ್ದೆ-1951ರ ಅಡಿಯಲ್ಲಿ ವಿಧಾನಸಭೆ ಚುನಾವಣೆ ನಡೆಸುವ ವಿಚಾರವಾಗಿ ಅರ್ಜಿದಾರರು ತಮ್ಮ ಅರ್ಜಿಯಲ್ಲಿ ಕುಂದು ಕೊರತೆ ವ್ಯಕ್ತಪಡಿಸಿದ್ದಾರೆ. ಆದರೆ, ಕಾಯ್ದೆಯ ನಿಯಮಗಳನ್ನು ಪ್ರಶ್ನಿಸಿಲ್ಲ. ಅರ್ಜಿದಾರರು ಎತ್ತಿರುವ ವಿಚಾರಗಳ ಕುರಿತು ನ್ಯಾಯಾಲಯ ಯಾವುದೇ ಆದೇಶ ನೀಡಲು ಸಾಧ್ಯವಿಲ್ಲ. ತಪ್ಪು ಗ್ರಹಿಕೆಯಿಂದ ಅರ್ಜಿ ಸಲ್ಲಿಸಲಾಗಿದ್ದು, ಅದನ್ನು ವಜಾಗೊಳಿಸಲಾಗುತ್ತಿದೆ ಎಂದು ಆದೇಶದಲ್ಲಿ ಪೀಠ ತಿಳಿಸಿದೆ.