ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2021ನೇ ಸಾಲಿನ ಯುವಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿಗಳನ್ನು ಆಹ್ವಾನಿಸಿದೆ.
ಆಯ್ಕೆಯಾದ ಹಸ್ತಪ್ರತಿಗಳ ಪ್ರಕಟಣೆಗೆ 15 ಸಾವಿರ ರೂ.ಗಳ ಪ್ರೋತ್ಸಾಹಧನ ಸಿಗಲಿದ್ದು, ಅರ್ಜಿದಾರರು 18 ರಿಂದ 40 ವರ್ಷ ವಯೋಮಿತಿಯವರಾಗಿರಬೇಕು. ಸ್ವ ವಿವರವುಳ್ಳ ಮನವಿಯೊಂದಿಗೆ ದೃಢೀಕೃತ ಎಸ್.ಎಸ್.ಎಲ್.ಸಿ. ಪ್ರಮಾಣ ಪತ್ರದ ಪ್ರತಿ ಅಥವಾ ಅಧಿಕೃತವಾಗಿ ದೃಢೀಕರಿಸಲ್ಪಟ್ಟ ಜನ್ಮದಾಖಲಾತಿ ಪ್ರಮಾಣ ಪತ್ರದ ಪ್ರತಿಯನ್ನು ಸಲ್ಲಿಸಬೇಕು. ಸಲ್ಲಿಸಲ್ಪಡುತ್ತಿರುವ ಕೃತಿಯು ಚೊಚ್ಚಲ ಕೃತಿಯಾಗಿರಬೇಕು, ಎಲ್ಲಿಯೂ ಪ್ರಕಟವಾಗಿಲ್ಲವೆಂದು ಸ್ವಯಂ ದೃಢೀಕರಣ ಪತ್ರ ನೀಡಬೇಕು ಎಂದು ಪ್ರಾಧಿಕಾರ ಹೇಳಿದೆ.
ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯು ಡಿಟಿಪಿ ಮಾಡಿಸಿದಾಗ 1/8 ಡೆಮ್ಮಿ ಅಳತೆಯಲ್ಲಿ ಕನಿಷ್ಟ 60 ಪುಟಗಳಿರಬೇಕು. ಅನುವಾದ, ಪಠ್ಯಪುಸ್ತಕ ಹಾಗೂ ಬೇರಾವುದೇ ಪದವಿ ಅಥವಾ ಸ್ನಾತಕೋತ್ತರ ಪದವಿಗೆ ಸಿದ್ಧಪಡಿಸಿದ ಸಂಶೋಧನಾ ಪ್ರಬಂಧಗಳನ್ನು ಹೊರತುಪಡಿಸಿ, ಕಥೆ, ಕಾದಂಬರಿ, ಕವನ, ನಾಟಕ, ವಿಮರ್ಶಾ ಲೇಖನ, ಪ್ರಬಂಧ ಮುಂತಾದ ಕನ್ನಡ ಸಾಹಿತ್ಯ ಪ್ರಕಾರಗಳಿಗೆ ಸಂಬಂಧಿಸಿದಂತೆ ಹಸ್ತಪ್ರತಿ ಇರಬೇಕು.