ಬೆಂಗಳೂರು: ಅವಧಿ ಪೂರ್ಣಗೊಂಡಿರುವ ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಕ ಮಾಡಲು ಮುಂದಾಗಿರುವ ಸರ್ಕಾರದ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಕ ಮಾಡಲು ಜಿಲ್ಲಾಧಿಕಾರಿಗಳಿಗೆ ಸರ್ಕಾರ ಸೂಚಿಸಿದ್ದ ಕ್ರಮವನ್ನು ರದ್ದುಪಡಿಸುವಂತೆ ಕೋರಿ, ಚಳ್ಳಕೆರೆ ತಾಲೂಕಿನ ಸೋಮಗುದ್ದಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿ.ಎಲ್. ಸತೀಶ್ ಬಾಬು ಮತ್ತಿತರರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ನ್ಯಾ. ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಪೀಠ ವಜಾಗೊಳಿಸಿದೆ.
ಹೈಕೋರ್ಟ್ ತನ್ನ ಆದೇಶದಲ್ಲಿ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆಯ ಸೆಕ್ಷನ್ 8 (4) ರ ಪ್ರಕಾರ ಗ್ರಾಮ ಪಂಚಾಯಿತಿಗೆ ಒಂದು ಬಾರಿ ಆಡಳಿತಾಧಿಕಾರಿ ನೇಮಕ ಮಾಡಲು ಅವಕಾಶವಿದೆ. ಪಂಚಾಯತ್ ರಾಜ್ ಕಾಯ್ದೆ ಸೆಕ್ಷನ್ 9 ರ ಪ್ರಕಾರ ಪಂಚಾಯಿತಿಗೆ ಆಯ್ಕೆಯಾದವರ ಅಧಿಕಾರಾವಧಿ 5 ವರ್ಷ ಮಾತ್ರ. ಐದು ವರ್ಷದ ನಂತರವೂ ಚುನಾಯಿತ ಪ್ರತಿನಿಧಿ ಮುಂದುವರಿಯುವುದನ್ನು ಸಂವಿಧಾನದ ವಿಧಿ 243(ಇ) ನಿರ್ಬಂಧಿಸುತ್ತದೆ. ಇದಕ್ಕೆ ತದ್ವಿರುದ್ಧವಾಗಿ ಅವಧಿ ಮುಗಿದಿರುವ ಗ್ರಾ.ಪಂ. ಸದಸ್ಯರನ್ನು ಮುಂದುವರಿಸುವಂತೆ ಆದೇಶಿಸಲು ನ್ಯಾಯಾಲಯಕ್ಕೆ ಅವಕಾಶವಿಲ್ಲ ಎಂದು ಅಭಿಪ್ರಾಯಪಟ್ಟಿದೆ.
ಪ್ರಕರಣದ ಹಿನ್ನೆಲೆ:
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆ-1993ರ ನಿಯಮ 41 ಮತ್ತು 42ರಂತೆ ಅವಧಿ ಪೂರ್ಣಗೊಂಡಿರುವ ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದರು. ಇದನ್ನು ಪ್ರಶ್ನಿಸಿದ್ದ ಅರ್ಜಿದಾರರು, 2020ರ ಜೂನ್ 17ರಂದು ಜಿಲ್ಲಾಧಿಕಾರಿಗಳಿಗೆ ನೀಡಿರುವ ಸೂಚನೆ ರದ್ದುಗೊಳಿಸಬೇಕು. ಚುನಾವಣೆ ನಡೆದು ಪ್ರತಿನಿಧಿಗಳು ಆಯ್ಕೆ ಆಗುವ ತನಕ ಈಗಿರುವ ಸದಸ್ಯರನ್ನೇ ಮುಂದುವರಿಸಬೇಕು ಎಂದು ಕೋರಿದ್ದರು.