ಬೆಂಗಳೂರು: ರಾಜ್ಯದಲ್ಲಿ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಲಕ್ಷಾಂತರ ಹುದ್ದೆಗಳು ಖಾಲಿ ಇವೆ ಎಂಬುದು ಸರ್ಕಾರದ ಅಂಕಿ ಅಂಶಗಳಿಂದಲೇ ತಿಳಿಯುತ್ತಿದೆ. ಈ ನಿಟ್ಟಿನಲ್ಲಿ ಇತ್ತೀಚೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅವರು ಒಂದು ವರ್ಷದಲ್ಲಿ ಲಕ್ಷ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಘೋಷಿಸಿದ್ದರು. ಅದೇ ರೀತಿ ಕಳೆದ ಆಗಸ್ಟ್ ತಿಂಗಳಿನಿಂದ ಖಾಲಿಯಿರುವ ಕರ್ನಾಟಕ ಪೊಲೀಸ್ ದೂರು ಪ್ರಾಧಿಕಾರದ ಅಧ್ಯಕ್ಷ ಮತ್ತು ಇಬ್ಬರು ಸದಸ್ಯರ ಸ್ಥಾನಗಳನ್ನು ಭರ್ತಿ ಮಾಡುವುದಕ್ಕೆ ನಿರ್ದೇಶಿಸುವಂತೆ ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಕೆಯಾಗಿದೆ.
ಈ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ವಕೀಲರಾದ ಸುಧಾ ಕಾಟ್ವಾ ಎಂಬುವರು ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಲೆ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್ ಕಿಣಗಿ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿದೆ. ಅಲ್ಲದೇ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಹೆಚ್ಚುವರಿ ಕಾರ್ಯದರ್ಶಿಗೆ ನ್ಯಾಯಪೀಠ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಮುಂದೂಡಿದೆ.
ಅಧ್ಯಕ್ಷ ಸ್ಥಾನ ಭರ್ತಿ ಕೋರಿ ಅರ್ಜಿ:ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಎಸ್ ಉಮಾಪತಿ ವಾದ ಮಂಡಿಸಿ, ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಪೊಲೀಸ್ ಇಲಾಖೆಯ ಎಲ್ಲಾ ಶ್ರೇಣಿಯ ಅಧಿಕಾರಿಗಳ ವಿರುದ್ಧ ದೂರು ಪರಿಶೀಲಿಸಿ ಅಗತ್ಯ ಕ್ರಮ ಜರುಗಿಸಲು ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಪೊಲೀಸ್ ಪ್ರಾಧಿಕಾರ ರಚನೆ ಮಾಡಬೇಕಾಗಿದೆ. ಸ್ವತಂತ್ರ ಮತ್ತು ಶಾಸನಾತ್ಮಕ ಹುದ್ದೆಯಾದ ಪ್ರಾಧಿಕಾರದ ಅಧ್ಯಕ್ಷ ಹುದ್ದೆಗೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಯನ್ನು ನೇಮಿಸಬೇಕಿದೆ. ಅಧ್ಯಕ್ಷ ಹುದ್ದೆಯು 2022ರ ಆ.11ರಿಂದ ಖಾಲಿ ಉಳಿದಿದೆ ಎಂದು ವಿವರಿಸಿದರು.