ಬೆಂಗಳೂರು :ನಂಜನಗೂಡು ತಾಲೂಕು ವೈದ್ಯಾಧಿಕಾರಿ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮೈಸೂರಿನ ಪ್ರಾದೇಶಿಕ ಆಯುಕ್ತರನ್ನು ನೇಮಕ ಮಾಡಿದ್ದು, ಒಂದು ವಾರದಲ್ಲಿ ವರದಿ ನೀಡುವಂತೆ ಸೂಚನೆ ನೀಡಿದ್ದಾರೆ.
ನಂಜನಗೂಡು ತಾಲೂಕು ಪ್ರಭಾರ ಆರೋಗ್ಯಾಧಿಕಾರಿಯಾಗಿದ್ದ ಡಾ ಎಸ್.ಆರ್. ನಾಗೇಂದ್ರ, ಮೇಲಧಿಕಾರಿಗಳ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಪ್ರಕರಣದ ತನಿಖೆಯನ್ನು ನಿಷ್ಪಕ್ಷಪಾತವಾಗಿ ಮಾಡಿ ಮೃತರ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ನೆಮ್ಮದಿಯಿಂದ ಕೆಲಸ ಮಾಡುವ ವಾತಾವರಣ ನಿರ್ಮಾಣ ಮಾಡಬೇಕು ಎಂದು ಕೋರಿ ರಾಜ್ಯ ನೌಕರರ ಸಂಘ ಮನವಿ ಸಲ್ಲಿಸಿತ್ತು. ಇದಕ್ಕೆ ಸ್ಪಂದಿಸಿದ ಸಿಎಂ, ತನಿಖಾಧಿಕಾರಿಯನ್ನು ನೇಮಕ ಮಾಡಿದ್ದಾರೆ.
ಸಿಎಂ ಆದೇಶದ ವಿವರ :
1. ಮೃತರ ಕುಟುಂಬಕ್ಕೆ ಕೂಡಲೇ 50 ಲಕ್ಷ ರೂ. ಪರಿಹಾರ ನೀಡುವುದು.
2. ಕುಟುಂಬದ ಅವಲಂಬಿತರಿಗೆ ಅನುಕಂಪದ ಆಧಾರದ ನೇಮಕಾತಿಯನ್ನು ನೀಡುವುದು
3. ಸರ್ಕಾರದಿಂದ ದೊರೆಯಬಹುದಾದ ಇನ್ನಿತರ ಸೌಲಭ್ಯಗಳನ್ನು ವಿಳಂಬ ಮಾಡದೇ ನೀಡುವುದು
4. ಘಟನೆ ಸಂಬಂಧವಾಗಿ ನಿಷ್ಪಕ್ಷಪಾತ ಹಾಗೂ ಸಮಗ್ರವಾಗಿ ತನಿಖೆ ನಡೆಸಿ 7 ದಿನಗಳೊಳಗಾಗಿ ವರದಿಯನ್ನು ನೀಡಿ ಪ್ರಾದೇಶಿಕ ಆಯುಕ್ತರು ಮೈಸೂರು ಅವರನ್ನು ನೇಮಿಸಲಾಗಿದೆ.
ಡಾ. ಎಸ್.ಆರ್. ನಾಗೇಂದ್ರ ಅವರ ಆತ್ಮಹತ್ಯೆ ತುಂಬಾ ನೋವಿನ ಸಂಗತಿ. ಅವರ ಕುಟುಂಬಕ್ಕೆ ನೋವನ್ನು ಭರಿಸುವಂತಹ ಶಕ್ತಿಯನ್ನು ಭಗವಂತ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇವೆ. ಕೋವಿಡ್ ಕರ್ತವ್ಯದಲ್ಲಿರುವ ಸರ್ಕಾರಿ ನೌಕರರು ಯಾವುದೇ ಒತ್ತಡಗಳಿದ್ದಲ್ಲಿ ಧೃತಿಗೆಡುವ ಅವಶ್ಯಕತೆಯಿಲ್ಲ. ಸರ್ಕಾರ ನಿಮ್ಮ ಜೊತೆ ಇದೆ. ನಿಮ್ಮ ಯಾವುದೇ ಸಮಸ್ಯೆಗಳಿದ್ದಲ್ಲಿ ಸಂಬಂಧಿಸಿದ ಮೇಲಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ ಎಂದು ಸಿಎಂ ತಿಳಿಸಿದ್ದಾರೆ.