ಬೆಂಗಳೂರು: ಮೂವರು ಉಪಮುಖ್ಯಮಂತ್ರಿಗಳ ನೇಮಕ ವಿಚಾರ ಗಾಳಿ ಸುದ್ದಿಯಾಗಿದ್ದು, ಈ ಕುರಿತು ಎಲ್ಲಿಯೂ ಚರ್ಚೆ ನಡೆದಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸಿಎಂ ನೇಮಕದ ಬಗ್ಗೆ ಸಚಿವರು ವೈಯಕ್ತಿಕ ಅಭಿಪ್ರಾಯ ಹೇಳಿರುತ್ತಾರೆ. ರಾಜಣ್ಣ ಅವರ ಹೇಳಿಕೆಯೂ ಅಷ್ಟೆ. ಅವರ ದೃಷ್ಟಿಯಲ್ಲಿ ಒಳ್ಳೆಯದೂ ಇರಬಹುದು, ಹೀಗಾಗಿ ಹೇಳಿರುತ್ತಾರೆ. ಈ ಬಗ್ಗೆ ಹೈಕಮಾಂಡ್ ನಿರ್ಧಾರವೇ ನನ್ನ ನಿರ್ಧಾರ ಎಂದರು.
ಸಚಿವರ ದೆಹಲಿ ಪ್ರವಾಸದ ಬಗ್ಗೆ ಮಾತನಾಡಿ, ಒಬ್ಬೊಬ್ಬರು ಒಂದೊಂದು ಕಾರಣ ಇಟ್ಟುಕೊಂಡು ದೆಹಲಿಗೆ ಹೋಗುತ್ತಾರೆ. ಈ ವೇಳೆ ಪಕ್ಷದ ಮುಖ್ಯ ಕಚೇರಿಗೆ ಹೋಗಿ ರಾಜ್ಯ ಉಸ್ತುವಾರಿಯನ್ನು ಭೇಟಿ ಮಾಡುವುದು, ಸಾಧ್ಯವಾದರೆ ಅಧ್ಯಕ್ಷರ ಜೊತೆ ಚರ್ಚಿಸುತ್ತಾರೆ. ಆಡಳಿತದಲ್ಲಿರುವಾಗ ಪಕ್ಷದ ಹೈಕಮಾಂಡ್ ಸಲಹೆಗಳನ್ನು ಸ್ವೀಕರಿಸಬೇಕು. ಇದೆಲ್ಲ ಸಾಮಾನ್ಯವಾಗಿ ನಡೆಯುವ ಬೆಳವಣಿಗೆ. ಅದಕ್ಕೆ ಬೇರೆ ಅರ್ಥ ಕಲ್ಪಿಸುವ ಅವಶ್ಯಕತೆಯಿಲ್ಲ ಎಂದು ಹೇಳಿದರು.
ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ನನಗೆ ಯಾರು ಹೇಳಿಲ್ಲ. ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂಬುದು ಮಾಧ್ಯಮದಲ್ಲಿ ಬಂದಿರುವುದನ್ನು ಗಮನಿಸಿದ್ದೇನೆ. ಈವರೆಗೆ ಯಾವುದೇ ಚರ್ಚೆ ನಡೆದಿಲ್ಲ. ಹೈಕಮಾಂಡ್ ಸೂಚಿಸಿದರೆ ಮುಂದಿನ ತೀರ್ಮಾನದ ಬಗ್ಗೆ ತಿಳಿಸುತ್ತೇನೆ ಎಂದರು.
ಎಲ್ಲಾ ಸಮುದಾಯಗಳಿಗೆ ಅವಕಾಶ ಸಿಗಬೇಕೆಂದು ಕೇಳುವುದರಲ್ಲಿ ತಪ್ಪೇನಿಲ್ಲ: ಸಚಿವ ಹೆಚ್.ಸಿ.ಮಹದೇವಪ್ಪ
ಮಹದೇವಪ್ಪ ಪ್ರತಿಕ್ರಿಯೆ:ಎಲ್ಲಾ ಸಮುದಾಯಗಳಿಗೆ ಅವಕಾಶ ಸಿಗಬೇಕೆಂದು ಕೇಳುವುದರಲ್ಲಿ ತಪ್ಪೇನಿಲ್ಲ ಎಂದು ಸಚಿವ ಹೆಚ್.ಸಿ. ಮಹದೇವಪ್ಪ ತಿಳಿಸಿದರು. ಡಿಸಿಎಂ ವಿಚಾರವಾಗಿ ಕೆ.ಎನ್. ರಾಜಣ್ಣ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸುತ್ತ, ಎಲ್ಲಾ ಸಮುದಾಯಗಳಿಗೂ ಅವಕಾಶ ಸಿಗಬೇಕು. ಹಾಗಂತ ಕೇಳುವುದರಲ್ಲಿ ತಪ್ಪೇನಿಲ್ಲ. ರಾಜಣ್ಣ ಒಬ್ಬ ಸೀನಿಯರ್ ಲೀಡರ್. ರಾಜಕೀಯ ವಿಶ್ಲೇಷಣೆ ಮಾಡಿ ಹೇಳಿದ್ದಾರೆ. ಆದರೆ ತೀರ್ಮಾನ ಮಾಡುವುದು ಹೈಕಮಾಂಡ್ ಎಂದು ತಿಳಿಸಿದರು.
ಲೋಕಸಭೆ ಚುನಾವಣೆಗೆ ಸಚಿವರನ್ನು ಕಣಕ್ಕಿಳಿಸುವ ಬಗ್ಗೆ ಚರ್ಚೆ ಇಲ್ಲ. ಹೆಚ್ಚು ಸ್ಥಾನ ಗೆಲ್ಲಬೇಕಲ್ವಾ. ಹೈಕಮಾಂಡ್ ಏನು ತೀರ್ಮಾನ ಮಾಡುತ್ತೋ ನೋಡಬೇಕು. ಈ ಬಗ್ಗೆ ಚರ್ಚೆಗೆ ಜನವರಿ 10 ರಂದು ಎಐಸಿಸಿ ವೀಕ್ಷಕರು ರಾಜ್ಯಕ್ಕೆ ಬರುತ್ತಾರೆ ಎಂದರು.
ಸಚಿವ ಸತೀಶ ಜಾರಕಿಹೊಳಿ ಹೇಳಿಕೆ: ನಿನ್ನೆ ಡಿಸಿಎಂ ವಿಚಾರವಾಗಿ ಪ್ರತಿಕ್ರಿಯಿಸಿದ್ದ ಸಚಿವ ಸತೀಶ ಜಾರಕಿಹೊಳಿ, ಹೆಚ್ಚುವರಿ ಉಪಮುಖ್ಯಮಂತ್ರಿ (ಡಿಸಿಎಂ) ಹುದ್ದೆ ಸೃಷ್ಟಿ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡಬೇಕು. ಈ ಬಗ್ಗೆ ಸಚಿವ ರಾಜಣ್ಣ ಸಾಕಷ್ಟು ಬಾರಿ ಹೇಳಿದ್ದಾರೆ. ನಾವೂ ಕೂಡ ಹಿಂದೆ ಪದೇ ಪದೆ ಹೇಳಿದ್ದೇವೆ. ಸಮುದಾಯವಾರು ಡಿಸಿಎಂ ಆಗಬೇಕು ಅಂತ ಇದೆ. ವರಿಷ್ಠರು ತೀರ್ಮಾನ ಮಾಡಬೇಕು. ಯಾವಾಗ ಮಾಡುತ್ತಾರೋ ನೋಡಬೇಕು. ಅಲ್ಲಿವರೆಗೆ ನಾವು ಕಾಯಬೇಕು ಅಷ್ಟೇ. ನಾವೇನೂ ದೆಹಲಿಗೆ ಹೋಗಲ್ಲ. ಹೋದರೆ ಹೇಳುತ್ತೇನೆ ಎಂದು ಹೇಳಿದ್ದರು. ಸಮುದಾಯವಾರು ಡಿಸಿಎಂ ಮಾಡುವುದರಿಂದ ಪಕ್ಷಕ್ಕೆ ಲಾಭ ಆಗುತ್ತದೆ ಎಂದು ಸಚಿವ ಕೆ ಎನ್ ರಾಜಣ್ಣ ಹೇಳಿದ್ದರು.
ಇದನ್ನೂ ಓದಿ:ಸಮುದಾಯವಾರು ಡಿಸಿಎಂ ಮಾಡಬೇಕೆಂದು ಹೈಕಮಾಂಡ್ಗೆ ಸಲಹೆ ನೀಡಿದ್ದೇವೆ: ಕೆ.ಎನ್.ರಾಜಣ್ಣ