ಬೆಂಗಳೂರು:ಕೋರಂ ಕೊರತೆಯ ನಡುವೆ ರಾಜ್ಯ ಬಿಜೆಪಿ ಕೋರ್ ಕಮಿಟಿ ಸದಸ್ಯರ ಸಭೆಯು ನಿಗದಿತ ಸಮಯಕ್ಕೂ ಮುನ್ನವೇ ಆರಂಭಗೊಂಡು ಅಷ್ಟೇ ಬೇಗ ಮುಗಿಸಿದ್ದು ಸಾಕಷ್ಟು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅರವಿಂದ್ ಲಿಂಬಾವಳಿ ಇಂದು ಬಿಜೆಪಿ ಕಚೇರಿಯಲ್ಲಿ ಪಕ್ಷದ ಕೋರ್ ಕಮಿಟಿ ಸಭೆ ನಡೆಯಿತು. ಕೋರ್ ಕಮಿಟಿ ಸದಸ್ಯರ ಗೈರು ಹಾಜರಿ ಕಾರಣ ಪೂರ್ವ ನಿಗದಿತ ಸಮಯಕ್ಕೆ ಮೊದಲೇ ಕೋರ್ ಕಮಿಟಿ ಸಭೆ ಮುಕ್ತಾಯವಾಯಿತು. ಕೇಂದ್ರ ಸಚಿವರಾದ ಡಿ.ವಿ.ಸದಾನಂದಗೌಡ, ಪ್ರಹ್ಲಾದ್ ಜೋಶಿ, ಡಿಸಿಎಂ ಗೋವಿಂದ ಕಾರಜೋಳ, ಸಚಿವರಾದ ಸಿ.ಟಿ.ರವಿ,ಆರ್.ಅಶೋಕ್, ಜಗದೀಶ್ ಶೆಟ್ಟರ್, ಈಶ್ವರಪ್ಪ, ಮಾಜಿ ಸಚಿವ ಸಿ.ಎಂ.ಉದಾಸಿ, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಕೋರ್ ಕಮಿಟಿ ಸಭೆಗೆ ಗೈರಾಗಿದ್ದು ಕೇವಲ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾಜಿ ಸಚಿವ ಅರವಿಂದ ಲಿಂಬಾವಳಿ ,ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್ ಮಾತ್ರ ಕೋರ್ ಕಮಿಟಿ ಸಭೆಯಲ್ಲಿ ಹಾಜರಿದ್ದರು. ಸದಸ್ಯರ ಕೊರತೆಯಿಂದಾಗಿ ಸುದೀರ್ಘ ಚರ್ಚೆ ನಡೆಸದೇ ಕೇವಲ ಪ್ರಸ್ತಾಪಗಳಿಗೆ ಸೀಮಿತಗೊಳಿಸಿ ಮುಕ್ತಾಯಗೊಳಿಸಲಾಗಿದೆ ಎನ್ನಲಾಗಿದೆ.
ಸಭೆ ಬಳಿಕ ಮಾಹಿತಿ ನೀಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ, ದಕ್ಷಿಣ ಕರ್ನಾಟಕದ 8 ವಿಧಾನಸಭಾ ಕ್ಷೇತ್ರಗಳ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚಿಸಲಾಯ್ತು. ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುವುದಾಗಿ ಪ್ರಮುಖರು ಸಮ್ಮತಿ ಸೂಚಿಸಿದ್ದಾರೆ. ಉತ್ತರ ಕರ್ನಾಟಕದ 7 ವಿಧಾನಸಭಾ ಕ್ಷೇತ್ರಗಳ ಬಗ್ಗೆ ಅಕ್ಟೋಬರ್ 26ರಂದು ಹುಬ್ಬಳ್ಳಿಯಲ್ಲಿ ಸಭೆ ಸೇರಲು ನಿರ್ಧರಿಸಲಾಗಿದೆ. ಅಂದು ಮತ್ತೆ ಹುಬ್ಬಳ್ಳಿಯಲ್ಲಿ ಕೋರ್ ಕಮಿಟಿ ಸಭೆ ನಡೆಯಲಿದೆ. ರಾಜ್ಯದಲ್ಲಿ ಮತ್ತೆ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ನೆರೆ ಸಂತ್ರಸ್ತರ ನೆರವಿಗೆ ಧಾವಿಸುವಂತೆ ಬಿಜೆಪಿ ಕಾರ್ಯಕರ್ತರಿಗೆ ಮನವಿ ಮಾಡಲು ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಲಾಯಿತು ಎಂದಿದ್ದಾರೆ.
ಸಿಎಂ ಯಡಿಯೂರಪ್ಪ ಹೊರಡುವ ಸಂದರ್ಭಕ್ಕೆ ಬಿಜೆಪಿ ಕಚೇರಿಗೆ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಆಗಮಿಸಿದರು. ಸಿಎಂ ನಿರ್ಗಮನದ ಬಳಿಕ ಮಹಾಲಕ್ಷ್ಮಿ ಬಡಾವಣೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಮುಖರು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಭೆ ನಡೆಸಿದ್ದಾರೆ. ಮಹಾಲಕ್ಷಿ ಬಡಾವಣೆ ಕ್ಷೇತ್ರದಲ್ಲಿ ಅನರ್ಹ ಶಾಸಕ ಗೋಪಾಲಯ್ಯಗೆ ಮತ್ತೆ ಟಿಕೆಟ್ ನೀಡಲು ಉದ್ದೇಶಿಸಿರುವ ಸಿಎಂ ಯಡಿಯೂರಪ್ಪ ನಿರ್ಧಾರಕ್ಕೆ ಪರಾಜಿತ ಅಭ್ಯರ್ಥಿಗಳು ಹಾಗೂ ಬಿಜೆಪಿ ಪ್ರಮುಖರ ವಿರೋಧ ಸಂಬಂಧ ಸಂಸದರೂ ಆಗಿರುವ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡರ ಸಮ್ಮುಖದಲ್ಲಿ ಚರ್ಚೆ ನಡೆಸಿದ್ದಾರೆ.