ಬೆಂಗಳೂರು :ಕಳೆದ ಹದಿನೈದು ದಿನಗಳಿಂದ ಆಶಾ ಕಾರ್ಯರ್ತೆಯರು ಪ್ರತಿಭಟನೆ ನಡೆಸುತ್ತಿದ್ದರೂ ಸರ್ಕಾರ ಬೇಡಿಕೆಗೆ ಸ್ಪಂದಿಸಿಲ್ಲ. ಹೀಗಾಗಿ ಜುಲೈ 29ರಂದು ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಾಕಲು ಮತ್ತು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಹೋರಾಟ ಹಮ್ಮಿಕೊಳ್ಳಲು ತೀರ್ಮಾನಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಆಶಾ ಕಾರ್ಯಕರ್ತೆಯರ ಸಂಘದ ಕಾರ್ಯದರ್ಶಿ ನಾಗಲಕ್ಷ್ಮಿ, ಜುಲೈ 10ರಿಂದ ಸೇವೆ ಸ್ಥಗಿತಗೊಳಿಸಿ ನಮ್ಮ ಬೇಡಿಕೆ ಈಡೇರಿಸುವಂತೆ ಪ್ರತಿಭಟನೆ ಮಾಡಲಾಗುತ್ತಿದೆ. ಈವರೆಗೆ ರಾಜ್ಯ ಸರ್ಕಾರದಿಂದ ಯಾವುದೇ ಸ್ಪಂದನೆ ಸಿಕ್ಕಿಲ್ಲ. ಇಂದು ಬಳ್ಳಾರಿಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ಮನೆಗೆ ಮುತ್ತಿಗೆ ಹಾಕಿ ಮನವಿ ಪತ್ರ ಸಲ್ಲಿಸಿದ್ದಾರೆ.
ಸಚಿವ ಶ್ರೀರಾಮುಲು ಕೇವಲ ಮನವಿ ಪತ್ರ ಸ್ವೀಕರಿಸಿ ಬೇಡಿಕೆ ಈಡೇರಿಸುವ ಭರವಸೆ ನೀಡಿ ವಾಪಸ್ ಕಳಿಸಿದ್ದಾರಂತೆ. ಸಾವಿರಾರು ಸಂಖ್ಯೆಯಲ್ಲಿ ಆಶಾ ಕಾರ್ಯಕರ್ತೆಯರು ಬೆಂಗಳೂರಿಗೆ ಬಂದು ಸಿಎಂ ಮನೆಗೆ ಮುತ್ತಿಗೆ ಹಾಕಲು ತೀರ್ಮಾನಿಸಿದ್ದೇವೆ ಎಂದು ತಿಳಿಸಿದರು.
ಆಶಾ ಕಾರ್ಯಕರ್ತೆಯರ ಸಂಘದ ಕಾರ್ಯದರ್ಶಿ ನಾಗಲಕ್ಷ್ಮಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕ ₹12 ಸಾವಿರ ಗೌರವಧನ ಖಾತರಿಪಡಿಸಬೇಕು. ಕೋವಿಡ್-19 ವಿರುದ್ಧದ ಹೋರಾಟಕ್ಕೆ ಅಗತ್ಯವಿರುವಷ್ಟು ಸುರಕ್ಷಾ ಸಾಮಗ್ರಿಗಳನ್ನು ನೀಡಬೇಕು. ಕೋವಿಡ್ಗೆ ತುತ್ತಾದ ಆಶಾ ಕಾರ್ಯಕರ್ತೆಯರ ಸಂಪೂರ್ಣ ಚಿಕಿತ್ಸಾ ವೆಚ್ಚ ಭರಿಸಬೇಕು ಮತ್ತು ಪರಿಹಾರ ನೀಡಬೇಕೆಂಬ ಬೇಡಿಕೆಗಳನ್ನು ಆಶಾ ಕಾರ್ಯಕರ್ತೆಯರು ಸರ್ಕಾರದ ಮುಂದಿಟ್ಟಿದ್ದಾರೆ.