ಬೆಂಗಳೂರು: ರಾಜ್ಯಾದ್ಯಂತ ಆಶಾ ಕಾರ್ಯಕರ್ತೆಯರು ಸರ್ಕಾರದ ವಿರುದ್ಧ ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿ ಧರಣಿ ನಡೆಸುತ್ತಿದ್ದಾರೆ.
ತುಮಕೂರಲ್ಲಿ ಆಶಾ ಕಾರ್ಯಕರ್ತೆಯರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಗೌರವಧನ 12,000 ರೂ ನಿಗದಿ ಪಡಿಸಬೇಕು, ಕೋವಿಡ್-19 ವಿರುದ್ಧದ ಹೋರಾಟಕ್ಕೆ ಅಗತ್ಯವಿರುವಷ್ಟು ರಕ್ಷಣಾ ಸಾಮಗ್ರಿಗಳನ್ನು ನೀಡಬೇಕು, ಎಲ್ಲಾ ಕೊರೊನಾ ವಾರಿಯರ್ಸ್‌ಗಳಿಗೆ ಆರೋಗ್ಯ ತಪಾಸಣೆ ಮಾಡಬೇಕು, ಪಾಸಿಟಿವ್ ಬಂದಿರುವ ಎಲ್ಲರಿಗೂ ಸಂಪೂರ್ಣ ಉಚಿತ ಚಿಕಿತ್ಸೆ ನೀಡಬೇಕು, ಈ ಅವಧಿಯಲ್ಲಿ ಮಾಸಿಕ ಗೌರವಧನ ಮತ್ತು ಪ್ರೋತ್ಸಾಹ ಧನ ನೀಡಬೇಕು, ಸೋಂಕಿತ ಆಶಾಗಳಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ಬಳ್ಳಾರಿಯಲ್ಲಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ 20ನೇ ದಿನಕ್ಕೆ ಕಾಲಿಟ್ಟಿದೆ. ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಹಾಕಿ ಪ್ರತಿಭಟಿಸಿದ್ದಾರೆ.
ನಗರದ ರಾಯಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿವರೆಗೆ ಪ್ರತಿಭಟನಾ ರ್ಯಾಲಿ ನಡೆಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ.
ಇತ್ತ ಹಾವೇರಿಯಲ್ಲಿಂದು ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು. ಎಐಟಿಯುಸಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು. ಆಶಾ ಕಾರ್ಯಕರ್ತೆಯರಿಗೆ ಕನಿಷ್ಠ 12 ಸಾವಿರ ರೂ. ಗೌರವಧನ ನೀಡಬೇಕು. ಕೊರೊನಾ ಸೋಂಕಿತ ಆಶಾಗಳಿಗೆ ಉಚಿತ ಚಿಕಿತ್ಸೆ ಸೇರಿದಂತೆ ವಿವಿಧ ಬೇಡಿಕೆಗಳು ಈಡೇರಿಸುವಂತೆ ಆಗ್ರಹಿಸಿದರು.
ಹಾಸನದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಆಶಾ ಕಾರ್ಯಕರ್ತೆಯರು ಮೌನ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಆರ್. ಗಿರೀಶ್ ಅವರಿಗೆ ಮನವಿ ಸಲ್ಲಿಸಿದರು. ಪ್ರತಿ ದಿನವೂ ಜನರೊಂದಿಗೆ ಬೆರೆತು ಕೆಲಸ ಮಾಡುವ ಆಶಾ ಕಾರ್ಯಕರ್ತೆಯರು ಹೆಚ್ಚು ಸೋಂಕಿಗೆ ಬಲಿಯಾಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ಕೊರೊನಾ ಸೋಂಕು ನಿಯಂತ್ರಿಸಲು ಅಮೂಲ್ಯವಾದ ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯಕರ್ತೆಯರ ಆರೋಗ್ಯವನ್ನು ರಕ್ಷಿಸುವ ಎಲ್ಲಾ ರಕ್ಷಣಾ ಸಾಮಗ್ರಿಗಳನ್ನು ಸಾಕಷ್ಟು ಪ್ರಮಾಣದಲ್ಲಿ ನೀಡಬೇಕೆಂದು ಆಗ್ರಹಿಸಿದ್ದಾರೆ.
ಬಿಸಿಲನಾಡು ರಾಯಚೂರಲ್ಲೂ ಆಶಾ ಕಾರ್ಯಕರ್ತರ ಪ್ರತಿಭಟನೆ ಜೋರಾಗಿತ್ತು. ಆಶಾ ಕಾರ್ಯಕರ್ತೆಗೆ ಗೌರವಧನ ಹೆಚ್ಚಿಸಬೇಕು. ಸೇವಾ ಭದ್ರತೆಯನ್ನ ಸರಕಾರ ಕಲ್ಪಿಸಬೇಕು ಎಂದು ಆಗ್ರಹಿಸಿದರು. ಕಳೆದ 20 ದಿನಗಳಿಂದ ನಡೆಸುತ್ತಿರುವ ಹೋರಾಟವನ್ನು ಇದೀಗ ತಾತ್ಕಾಲಿಕವಾಗಿ ಹಿಂಪಡೆಯುತ್ತೇವೆ. ಬರುವ ದಿನಗಳಲ್ಲಿ ನಮ್ಮ ಬೇಡಿಕೆಗಳನ್ನ ಸರಕಾರ ಕೂಡಲೇ ಈಡೇರಿಸಬೇಕು. ಇಲ್ಲದಿದ್ದರೆ ಇನ್ನೂ ಹೆಚ್ಚಿನ ಮಟ್ಟದಲ್ಲಿ ಹೋರಾಟ ನಡೆಸುವುದಾಗಿ ಸರ್ಕಾರಕ್ಕೆ ಎಚ್ಚರಿಸಿದರು.