ಬೆಂಗಳೂರು:ಭಾರತದಲ್ಲಿ ಚುನಾವಣೆಗಳಿಗಾಗಿ ಸಾವಿರಾರು ಕೋಟಿ ರೂ. ಹಣ ಅನಗತ್ಯವಾಗಿ ಪೋಲಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಲೋಕಸಭೆ ಹಾಗೂ ವಿಧಾನಸಭೆಗಳಿಗೆ ಏಕಕಾಲಕ್ಕೆ ಚುನಾವಣೆ ನಡೆಸುವುದು ಅತ್ಯಗತ್ಯವಾಗಿದೆ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.
ವಿಧಾನಸಭೆಯಲ್ಲಿ ಇಂದು ' ಒಂದು ರಾಷ್ಟ್ರ, ಒಂದು ಚುನಾವಣೆ ' ಎಂಬ ಪ್ರಸ್ತಾಪದ ಮೇಲಿನ ಚರ್ಚೆಗೆ ಅವಕಾಶ ಮಾಡಿಕೊಡುವ ಸಂದರ್ಭದಲ್ಲಿ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ದೇಶದಲ್ಲಿ ಏಕಕಾಲಕ್ಕೆ ಲೋಕಸಭೆ ಹಾಗೂ ವಿಧಾನಸಭೆಗಳಿಗೆ ಚುನಾವಣೆ ನಡೆಯದೇ ಇರುವುದರಿಂದ ಮಿತಿಮೀರಿದ ಭ್ರಷ್ಟಾಚಾರಕ್ಕೆ ದಾರಿಯಾಗಿದೆ ಎಂದರು.
ಈಗ ಪ್ರತಿವರ್ಷವೂ ದೇಶದ ಯಾವುದಾದರೂ ರಾಜ್ಯದ ವಿಧಾನಸಭೆಗೆ ಚುನಾವಣೆ ನಡೆಯುತ್ತಲೇ ಇರುತ್ತದೆ. ಆ ಮೂಲಕ ಜನಸೇವೆಯ ಕೆಲಸಕ್ಕಿಂತ ಸಮಸ್ಯೆಯೇ ಹೆಚ್ಚಾಗುತ್ತಿದೆ. 2019 ರಲ್ಲಿ ಲೋಕಸಭೆ ಹಾಗೂ ಮೂರು ರಾಜ್ಯಗಳ ವಿಧಾನಸಭೆಗಳಿಗೆ ಚುನಾವಣೆ ನಡೆಯಿತು. ಇದಕ್ಕಾಗಿ 60 ಸಾವಿರ ಕೋಟಿ ರೂ. ವೆಚ್ಚವಾಯಿತು. ಇದೇ ರೀತಿ ಮೇಲಿಂದ ಮೇಲೆ ಚುನಾವಣೆಗಳು ನಡೆಯುತ್ತಿದ್ದರೆ ರಾಷ್ಟ್ರೀಯ ಮತ್ತು ಪ್ರಾಂತೀಯ ಪಕ್ಷಗಳ ಗಮನ ಚುನಾವಣೆಗಳ ಕಡೆ ಇರುತ್ತದೆ. ಇದರಿಂದ ಅಭಿವೃದ್ಧಿ ಕಾರ್ಯಗಳಿಗೆ ಹೊಡೆತ ಬೀಳುತ್ತಿದೆ. ಹೀಗಾಗಿ ಒಂದು ರಾಷ್ಟ್ರ, ಒಂದು ಚುನಾವಣೆಯ ವಿಷಯದಲ್ಲಿ ಒಮ್ಮತಕ್ಕೆ ಬಂದು ಹಣ, ಸಮಯ ಉಳಿಸುವ ಅಗತ್ಯವಿದೆ. ಹಾಗೆ ಮಾಡಿದಾಗ ಮಾತ್ರವೇ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಜನರಿಗೆ ಒಳ್ಳೆಯ ಸೇವೆ ನೀಡಲು ಸಾಧ್ಯ. ಅಭಿವೃದ್ಧಿಯ ಕಡೆ ಗಮನ ನೀಡಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.