ಬೆಂಗಳೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮೇಲೆ ಕೊಡಗಿನಲ್ಲಿ ಮೊಟ್ಟೆ ಎಸೆದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷ ಮಡಿಕೇರಿ ಚಲೋಗೆ ಕರೆಕೊಟ್ಟಿದೆ. ತೀವ್ರ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡುವ ಸಲುವಾಗಿ ಕೊಡಗು ಜಿಲ್ಲೆಗೆ ಭೇಟಿ ನೀಡಿದ ಸಂದರ್ಭ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದರು. ಈ ಸಂದರ್ಭ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದು ವಿರಾಜ್ಪೇಟೆಯ ಸಂಪತ್ ಎಂಬ ವ್ಯಕ್ತಿ ಆಕ್ರೋಶ ವ್ಯಕ್ತಪಡಿಸಿದ್ದರು.
ಕೊಡಗು ಜಿಲ್ಲೆಗೆ ಪ್ರತಿಪಕ್ಷ ನಾಯಕರ ಭೇಟಿ ಸಂದರ್ಭ ನಡೆದ ಈ ಅಹಿತಕರ ಘಟನೆಯನ್ನು ಖಂಡಿಸಿ ಇದೀಗ ಕಾಂಗ್ರೆಸ್ ಶಾಸಕಾಂಗ ಪಕ್ಷದ ಮೂಲಕವೇ ಮಡಿಕೇರಿ ಚಲೋ ಕೈಗೊಳ್ಳಲು ತೀರ್ಮಾನಿಸಿ ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರು ಆಗಿರುವ ಸಿದ್ದರಾಮಯ್ಯ ಹಾಗೂ ಪಕ್ಷದ ಹಿರಿಯ ನಾಯಕರ ಸೂಚನೆ ಮೇರೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಾರ್ಯದರ್ಶಿ ಈ. ತುಕಾರಾಮ್ ಅವರಿಂದ ಅಧಿಕೃತ ಸೂಚನೆ ಹೊರಬಿದ್ದಿದೆ.