ಬೆಂಗಳೂರು:ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ರಾಜ್ಯಮಟ್ಟದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ವತಿಯಿಂದ ಆಚರಿಸಲಾಗುತ್ತಿದ್ದು, ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ವಿಕಾಸಸೌಧದಲ್ಲಿ ಇಂದು ಸಂಜೆ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ, ಪ್ರತಿವರ್ಷ ಮಾರ್ಚ್ 8ರಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಗುತ್ತಿತ್ತು. ಆದರೆ, ಈ ಸಾಲಿನಲ್ಲಿ ಮಾರ್ಚ್ 8ರಂದು ಆಯವ್ಯಯ ಮಂಡನೆಯಾದ್ದರಿಂದ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಅಂದು ಆಯೋಜಿಸಲು ಸಾಧ್ಯವಾಗಲಿಲ್ಲ. ಹಾಗಾಗಿ, ನಾಳೆ ಬೆಳಗ್ಗೆ 10 ಗಂಟೆಗೆ ಅರಮನೆ ಮೈದಾನದ ಪ್ರಿನ್ಸಸ್ ಗಾಲ್ಫ್ ಗೇಟ್ ನಂ-9ರಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಮಹಿಳೆಯರ ಕ್ಷೇತ್ರದಲ್ಲಿ ಅಪ್ರತಿಮ ಸೇವೆ ಸಲ್ಲಿಸಿದ 6 ಸಂಸ್ಥೆಗಳು, ಮಹಿಳೆಯರ ಅಭಿವೃದ್ಧಿಗಾಗಿ ಶ್ರಮಿಸಿದ 8 ವ್ಯಕ್ತಿಗಳು, ಕಲೆಕ್ಕೆ 5, ಸಾಹಿತ್ಯಕ್ಕೆ 3, ಕ್ರೀಡೆಗೆ 2, ಶಿಕ್ಷಣಕ್ಕೆ 1, ವೀರಮಹಿಳೆ 1 ಹಾಗೂ ರಾಜ್ಯಮಟ್ಟದ 10 ಅತ್ಯುತ್ತಮ ಸ್ತ್ರೀ ಶಕ್ತಿ ಗುಂಪುಗಳನ್ನು ಗುರುತಿಸಿ ಪ್ರಶಸ್ತಿಯನ್ನು ನೀಡಲಾಗುತ್ತಿದೆ.