ಕರ್ನಾಟಕ

karnataka

ETV Bharat / state

ಡಿಕೆಶಿ ವಿರುದ್ಧ ಸಿಬಿಐ ತನಿಖೆ: ಸಿದ್ದರಾಮಯ್ಯ ತಿರುಚುವ ಕೆಲಸ ಮಾಡಿದ್ದಾರೆ.. ಮಾಜಿ ಸಿಎಂ ಯಡಿಯೂರಪ್ಪ ಕಿಡಿ

B S Yeddyurappa Reaction: ಹೇಳಿದ್ದನ್ನೇ ಹೇಳಿ ಸುಳ್ಳನ್ನು ಸತ್ಯ ಮಾಡಲು ಸಿಎಂ ಸಿದ್ದರಾಮಯ್ಯ ಮತ್ತು ಅವರ ತಂಡದವರು ಮುಂದಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಕಿಡಿಕಾರಿದರು.

b-s-yeddyurappa-reaction-on-cm-siddaramaiah-statement
ಡಿಕೆಶಿ ವಿರುದ್ಧ ಸಿಬಿಐ ತನಿಖೆ: ಸಿದ್ದರಾಮಯ್ಯ ತಿರುಚುವ ಕೆಲಸ ಮಾಡಿದ್ದಾರೆ.. ಮಾಜಿ ಸಿಎಂ ಯಡಿಯೂರಪ್ಪ ಕಿಡಿ

By ETV Bharat Karnataka Team

Published : Nov 25, 2023, 8:01 PM IST

ಬೆಂಗಳೂರು :ಜಾರಿ ನಿರ್ದೇಶನಾಲಯವು ಡಿ ಕೆ ಶಿವಕುಮಾರ್ ವಿರುದ್ಧದ ಪ್ರಕರಣ ಸಿಬಿಐಗೆ ವಹಿಸುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದರಿಂದಲೇ ಅಂದಿನ ರಾಜ್ಯ ಸರ್ಕಾರ ಈ ಕ್ರಮ ತೆಗೆದುಕೊಂಡಿತ್ತು. ನಾನು ಶಿವಕುಮಾರ್ ಬಗ್ಗೆ ಹೇಳಿರುವುದು ನೂರಕ್ಕೆ ನೂರು ಸತ್ಯ. ಆದರೆ, ಸಿಎಂ ಸಿದ್ದರಾಮಯ್ಯ ಅವರು ಎಲ್ಲ ಗೊತ್ತಿದ್ದರೂ ತಿರುಚುವ ಕೆಲಸ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಆರೋಪಿಸಿದ್ದಾರೆ.

ತಮ್ಮ ನಿವಾಸದ ಬಳಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಯಡಿಯೂರಪ್ಪ, ಅಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದ ಇ.ಡಿ ಅಧಿಕಾರಿಗಳು ಡಿ.ಕೆ.ಶಿವಕುಮಾರ್ ಕೆಲವು ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಇದೊಂದು ಗಂಭೀರ ಪ್ರಕರಣವಾಗಿರುವುದರಿಂದ ಸಿಬಿಐಗೆ ವಹಿಸುವಂತೆ ಸೂಚನೆ ನೀಡಿದ್ದರಿಂದಲೇ ನಮ್ಮ ಸರ್ಕಾರ ಈ ಕ್ರಮ ತೆಗೆದುಕೊಂಡಿತ್ತು ಎಂದು ತಮ್ಮ ಹೇಳಿಕೆ ಸಮರ್ಥಿಸಿಕೊಂಡರು.

ಅಂದು ರಾಜ್ಯ ಅಡ್ವೋಕೇಟ್ ಜನರಲ್ ಅವರ ಅಭಿಪ್ರಾಯ ಪಡೆದೇ ಸಿಬಿಐ ತನಿಖೆಗೆ ಆದೇಶ ಮಾಡಲಾಗಿತ್ತು. ಇ.ಡಿಯವರು ಮುಖ್ಯ ಕಾರ್ಯದರ್ಶಿಗೆ ಬರೆದ ಪತ್ರದಲ್ಲಿ ಸಿಬಿಐಗೆ ಕೊಡುವಂತೆ ಸೂಚನೆ ಕೊಟ್ಟಿದ್ದರಿಂದ ಆದೇಶ ಮಾಡಿದೆವು. ಇದರಲ್ಲಿ ಯಾವುದೇ ನಿಯಮಗಳು ಉಲ್ಲಂಘನೆ ಆಗಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಇದೆಲ್ಲವೂ ಗೊತ್ತಿದ್ದರೂ ಜನರನ್ನು ದಿಕ್ಕು ತಪ್ಪಿಸಲು ಸುಳ್ಳು ಹೇಳುತ್ತಿದ್ದಾರೆ. ಎಜಿಯವರ ಅಭಿಪ್ರಾಯದ ಮೇರೆಗೆ ಸಿಬಿಐಗೆ ವಹಿಸಿದ್ದೆವು. ಒಂದಲ್ಲ, ಎರಡಲ್ಲ, ಸಾವಿರ ಬಾರಿ ಹೇಳುತ್ತೇನೆ. ನಾನು ಹೇಳಿರುವುದಕ್ಕೆ ಬದ್ಧನಾಗಿದ್ದೇನೆ. ಇನ್ನು ಮುಂದಾದರೂ ಸರ್ಕಾರ ಸುಳ್ಳು ಹೇಳುವುದನ್ನು ನಿಲ್ಲಿಸಬೇಕು ಎಂದು ಕಿಡಿಕಾರಿದರು.

ಯತ್ನಾಳ್ ಹೇಳಿಕೆಗೆ ತಿರುಗೇಟು : ನಮ್ಮ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಬರುವುದು ಬೇಡ ಎಂಬ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ತಿರುಗೇಟು ನೀಡಿದ ಯಡಿಯೂರಪ್ಪ, ಅವರ ಮನೆಗೆ ಹೋಗುತ್ತೇನೆ ಎಂದವರು ಯಾರು? ಎಂದರು. ಮಾಜಿ ಸಚಿವ ವಿ.ಸೋಮಣ್ಣ ಅವರನ್ನು ನಾನು ದೂರವಾಣಿಯಲ್ಲಿ ಸಂಪರ್ಕಿಸುವ ಪ್ರಯತ್ನ ಮಾಡಿದೆ. ಅವರಿಗೆ ಕರೆ ಮಾಡಿದರೂ ಸ್ವೀಕರಿಸಲಿಲ್ಲ. ಮುಂದಿನ ದಿನಗಳಲ್ಲಿ ಅವರ ಜೊತೆ ಮಾತನಾಡುತ್ತೇನೆ. ಸಿದ್ದಗಂಗಾ ಮಠದಲ್ಲಿ ಶ್ರೀಗಳ ಜೊತೆ ಸೋಮಣ್ಣ ಮಾತನಾಡಿರುವುದನ್ನು ಗಮನಿಸಿದ್ದೇನೆ. ಬರುವ ದಿನಗಳಲ್ಲಿ ಎಲ್ಲವೂ ಇತ್ಯರ್ಥವಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಸೋಮಣ್ಣ ಅವರನ್ನು ಪಕ್ಷದಲ್ಲೇ ಉಳಿಸಿಕೊಳ್ಳಲಾಗುವುದು. ಅವರು ಪಕ್ಷ ಬಿಟ್ಟು ಹೋಗುವುದಿಲ್ಲ ಎಂಬ ವಿಶ್ವಾಸವಿದೆ. ಏನೇ ಸಮಸ್ಯೆಗಳಿದ್ದರೂ ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ಅವರ ಸಮಸ್ಯೆಗಳನ್ನು ಇತ್ಯರ್ಥಪಡಿಸಲಾಗುವುದು. ಬಿಜೆಪಿ ಬಿಟ್ಟು ಹೋಗುವ ಚಿಂತನೆಯಲ್ಲಿ ಅವರಿಲ್ಲ ಎಂದರು. ಪಂಚರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿದ್ದು, ಎಲ್ಲ ರಾಜ್ಯಗಳಲ್ಲೂ ಬಿಜೆಪಿ ಗೆಲ್ಲಲಿದೆ ಎಂದರು.

ಇದನ್ನೂ ಓದಿ:ಡಿಕೆಶಿ ಪ್ರಕರಣ: ಹಿಂದಿನ ಸರ್ಕಾರ ಕಾನೂನುಬದ್ಧ ಕ್ರಮ ಅನುಸರಿಸಿಲ್ಲ- ಸಿಎಂ ಸಿದ್ದರಾಮಯ್ಯ

ABOUT THE AUTHOR

...view details