ಹಿಜಾಬ್ ನಿಷೇಧ ವಾಪಸ್ ಬಗ್ಗೆ ಬಿ.ವೈ ವಿಜಯೇಂದ್ರ ಪ್ರತಿಕ್ರಿಯೆ ಬೆಂಗಳೂರು: ಹಿಜಾಬ್ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದುಕೊಳ್ಳುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಧರ್ಮದ ಆಧಾರದಲ್ಲಿ ಯುವ ಮನುಸ್ಸುಗಳ ವಿಭಜನೆ ಮಾಡಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.
ಈ ಬಗ್ಗೆ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದರುವ ಅವರು, 'ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧವನ್ನು ಹಿಂತೆಗೆದುಕೊಳ್ಳುವ ಸಿಎಂ ಸಿದ್ದರಾಮಯ್ಯ ಅವರ ನಿರ್ಧಾರವು ಶೈಕ್ಷಣಿಕ ಸಂಸ್ಥೆಗಳಲ್ಲಿನ ಜಾತ್ಯಾತೀತ ಸ್ವರೂಪದ ಬಗ್ಗೆ ಪ್ರಶ್ನೆ ಮೂಡಿಸುತ್ತಿದೆ. ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರವು ಶಿಕ್ಷಣ ಸಂಸ್ಥೆಗಳಲ್ಲಿನ ಯುವ ಮನಸ್ಸುಗಳನ್ನು ಧಾರ್ಮಿಕ ಆಚರಣೆ ಆಧಾರದಲ್ಲಿ ವಿಭಜಿಸುತ್ತಿದೆ. ಇದರಿಂದ ಕಲಿಕೆಯ ವಾತಾವರಣಕ್ಕೂ ಹಿನ್ನಡೆಯಾಗಲಿದೆ. ವಿಭಜಿಸುವುದಕ್ಕಿಂತ ಶಿಕ್ಷಣಕ್ಕೆ ಆದ್ಯತೆ ನೀಡುವ ವಾತಾವರಣ ಬೆಳೆಸಬೇಕು. ಆಗ ಧಾರ್ಮಿಕ ಆಚರಣೆಗಳ ಒತ್ತಡವಿಲ್ಲದೆ, ವಿದ್ಯಾರ್ಥಿಗಳು ಶೈಕ್ಷಣಿಕ ವಿಚಾರಗಳ ಬಗ್ಗೆ ಗಮನ ಕೇಂದ್ರೀಕರಿಸಬಹುದಾಗಿದೆ' ಎಂದು ಹೇಳಿದ್ದಾರೆ.
ಆರ್. ಅಶೋಕ್ ಪ್ರತಿಕ್ರಿಯೆ:ಇದೇ ವಿಚಾರವಾಗಿ ಪ್ರತಿಪಕ್ಷ ನಾಯಕ ಆರ್. ಅಶೋಕ್ ಎಕ್ಸ್ನಲ್ಲಿ ಪ್ರತಿಕ್ರಿಯಿಸಿದ್ದಾರೆ. 'ಹಿಜಾಬ್ ವಿಷಯ ಹಠಾತ್ ಆಗಿ ಮುನ್ನೆಲೆಗೆ ಬಂದಿರುವುದರ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದೊಡ್ಡ ಕುತಂತ್ರ ಅಡಗಿದೆ. ಗ್ಯಾರಂಟಿಗಳಿಂದ ಬರಿದಾದ ಖಜಾನೆ, ಅನುದಾನಕ್ಕಾಗಿ ಶಾಸಕರ ಒತ್ತಡ, ನಿಗಮ ಮಂಡಳಿ ನೇಮಕಕ್ಕೆ ಸೊಪ್ಪು ಹಾಕದ ಹೈಕಮಾಂಡ್ ಇವೆಲ್ಲದರಿಂದ ತಾವೇ ಸೃಷ್ಟಿಸಿಕೊಂಡ ಚಕ್ರವ್ಯೂಹದಲ್ಲಿ ಸಿಲುಕಿಕೊಂಡಿರುವ ಮುಖ್ಯಮಂತ್ರಿ ಸಿದ್ದಾಮಯ್ಯ ಅವರು ಹಿಜಾಬ್ ವಿಷಯವನ್ನು ಪ್ರಸ್ತಾಪಿಸಿ ಜನರನ್ನು ದಿಕ್ಕು ತಪ್ಪಿಸಲು ಹೊರಟಿದ್ದಾರೆ' ಎಂದು ಆರೋಪಿಸಿದ್ದಾರೆ.
ಸಿದ್ದರಾಮಯ್ಯ ಹೇಳಿಕೆ: ರಾಜ್ಯದಲ್ಲಿ ಹಿಜಾಬ್ ನಿಷೇಧ ಆದೇಶವನ್ನು ಸರ್ಕಾರ ವಾಪಸ್ ತೆಗೆದುಕೊಳ್ಳಲಿದೆ. ಯಾವ ಡ್ರೆಸ್ ಹಾಕಿಕೊಂಡರೆ ನಮಗೇನು? ಅದು ಅವರವರ ಇಚ್ಚೆ. ಯಾವ ಊಟವನ್ನಾದ್ರೂ ಮಾಡ್ರಪ್ಪ, ನಮಗೇನು? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು. ಮೈಸೂರಿನ ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಕೇಳಿಬಂದ ಹಿಜಾಬ್ ಕುರಿತ ಪ್ರಶ್ನೆಗೆ, ಎಲ್ಲರೂ ಹಿಜಾಬ್ ಹಾಕಿಕೊಂಡು ಹೋಗಬಹುದು. ಆದೇಶ ಹಿಂಪಡೆಯಲು ಹೇಳಿದ್ದೇನೆ. ನಾನು ಧೋತಿ, ಜುಬ್ಬ ಹಾಕಿಕೊಳ್ಳುವೆ, ನೀನು ಪ್ಯಾಂಟ್ ಶರ್ಟ್ ಹಾಕಿಕೊಂಡರೆ ಹಾಕಿಕೋ, ಇದರಲ್ಲಿ ತಪ್ಪೇನಿದೆ?. ಮತಕ್ಕಾಗಿ ರಾಜಕಾರಣ ಮಾಡುವುದು ತಪ್ಪು. ಬಡವರಿಗಾಗಿ ನಮ್ಮ ಸರ್ಕಾರ ಕೆಲಸ ಮಾಡುತ್ತದೆ ಎಂದು ಹೇಳಿದ್ದರು.
ಇದನ್ನೂ ಓದಿ:ರಾಜ್ಯದಲ್ಲಿ ಹಿಜಾಬ್ ನಿಷೇಧ ಹಿಂತೆಗೆದುಕೊಳ್ಳುತ್ತೇವೆ: ಸಿಎಂ ಸಿದ್ದರಾಮಯ್ಯ