ಬೆಂಗಳೂರು :ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ಗಲಭೆ ಪ್ರಕರಣದ ಸಂಬಂಧ ಬಂಧನಕ್ಕೊಳಗಾಗಿದ್ದ ಮಾಜಿ ಮೇಯರ್ ಸಂಪತ್ ರಾಜ್ ಅವರಿಗೆ ಹೈಕೋರ್ಟ್ ಏಕಸದಸ್ಯ ಪೀಠ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಪ್ರಕರಣದಲ್ಲಿ ಜಾಮೀನು ನೀಡುವಂತೆ ಕೋರಿ ಸಂಪತ್ ರಾಜ್ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿರುವ ನ್ಯಾ.ಜಾನ್ ಮೈಕೆಲ್ ಕುನ್ಹ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ.
ವಿಚಾರಣೆ ವೇಳೆ ಸಂಪತ್ ರಾಜ್ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವಿಚಾರಣಾ ನ್ಯಾಯಾಲಯಕ್ಕೆ ಈಗಾಗಲೇ ಎರಡು ಆರೋಪಪಟ್ಟಿ ಸಲ್ಲಿಸಿದ್ದಾರೆ. ಆದರೆ, ಅವುಗಳಲ್ಲಿ ಅರ್ಜಿದಾರರ ಆರೋಪಕ್ಕೆ ಸಂಬಂಧಿಸಿದಂತೆ ಪ್ರಬಲ ಸಾಕ್ಷ್ಯಾಧಾರಗಳನ್ನು ನೀಡಿಲ್ಲ.
ಅರ್ಜಿದಾರರು ಪ್ರಕರಣದಲ್ಲಿ ಭಾಗಿಯಾಗಿಲ್ಲದಿದ್ದರೂ ರಾಜಕೀಯ ವೈಷಮ್ಯದಿಂದ ಅವರ ಹೆಸರನ್ನು ತಡವಾಗಿ ಸೇರಿಸಲಾಗಿದೆ. ಹೀಗಿದ್ದೂ ಅರ್ಜಿದಾರರು ಪೊಲೀಸರ ವಿಚಾರಣೆಗೆ ಸಹಕಾರ ನೀಡಲು ಸಿದ್ಧರಿದ್ದಾರೆ. ಆದ್ದರಿಂದ ಜಾಮೀನು ನೀಡಬೇಕು ಎಂದು ಮನವಿ ಮಾಡಿದ್ದರು.
ವಕೀಲರ ವಾದ ಪುರಸ್ಕರಿಸಿರುವ ಪೀಠ, ಪೊಲೀಸರ ತನಿಖೆ ಅಂತಿಮ ಹಂತಕ್ಕೆ ಬಂದಿರುವುದರಿಂದ ಆರೋಪಿಗೆ ಜಾಮೀನು ನೀಡಬಹುದು ಎಂದು ಅಭಿಪ್ರಾಯಪಟ್ಟು ಷರತ್ತುಬದ್ಧ ಜಾಮೀನು ನೀಡಿ ಆದೇಶಿಸಿದೆ. ಸಾಕ್ಷ್ಯಗಳ ಮೇಲೆ ಪ್ರಭಾವ ಬೀರಬಾರದು ಹಾಗೂ ನಾಶಪಡಿಸಬಾರದು. ತನಿಖೆಗೆ ಹಾಗೂ ವಿಚಾರಣೆಗೆ ಸಹಕರಿಸಬೇಕು ಮತ್ತು ತಪ್ಪದೇ ಹಾಜರಾಗಬೇಕು ಎಂಬ ಷರತ್ತುಗಳನ್ನು ವಿಧಿಸಿ ಕೋರ್ಟ್ ಜಾಮೀನು ನೀಡಿದೆ.
ಇದನ್ನೂ ಓದಿ: ಕೊರೊನಾ ಎಫೆಕ್ಟ್: ಸಂಕಷ್ಟದಲ್ಲಿ ಅಶೋಕ್ ಲೇಲ್ಯಾಂಡ್ ನೌಕರರು..!
ಗಲಭೆ ವೇಳೆ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಮೇಲೆ ದಾಳಿ ನಡೆಸಲು ತಮ್ಮ ಬೆಂಬಲಿಗರ ಮೂಲಕ ಕಿಡಿಗೇಡಿಗಳಿಗೆ ಕುಮ್ಮಕ್ಕು ನೀಡಿದ್ದರು ಎಂಬ ಆರೋಪ ಕಾಂಗ್ರೆಸ್‌ನ ಮಾಜಿ ಮೇಯರ್ ಸಂಪತ್ ರಾಜ್ ಮೇಲೆ ಕೇಳಿ ಬಂದಿತ್ತು.
ಪೊಲೀಸರು ಸಂಪತ್ ರಾಜ್ ವಶಕ್ಕೆ ಪಡೆದು ವಿಚಾರಣೆ ನಡೆಸುವ ವೇಳೆ ತಲೆ ಮರೆಸಿಕೊಂಡಿದ್ದರು. ಈ ಹಿನ್ನೆಲೆ ವಿಚಾರಣಾ ನ್ಯಾಯಾಲಯ ಸಂಪತ್ ರಾಜ್ಗೆ ಜಾಮೀನು ನಿರಾಕರಿಸಿತ್ತು. ಬಳಿಕ ಜೈಲು ಸೇರಿದ್ದ ಸಂಪತ್ ರಾಜ್, ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋಗಿದ್ದರು.