ಬೆಂಗಳೂರು: ಸಿಡಿ ಪ್ರಕರಣ ಸದನದಲ್ಲಿ ಚರ್ಚೆಗೆ ಬರುವ ಹಿನ್ನಲೆಯಲ್ಲಿ ಬಾಲಚಂದ್ರ ಜಾರಕಿಹೊಳಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಕೋರ್ ಕಮಿಟಿ ಸಭೆಯಲ್ಲಿಯೂ ವಿಷಯ ಪ್ರಸ್ತಾಪವಾಗುವ ಸಾಧ್ಯತೆಯಿಂದಾಗಿ ಸಹೋದರನ ಪರ ನಿಲುವು ವ್ಯಕ್ತಪಡಿಸುವಂತೆ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಗುರುವಾರ ಭೇಟಿ ನೀಡಿ ಸಿಎಂ ಯಡಿಯೂರಪ್ಪ ಜೊತೆ ಮಾತುಕತೆ ನಡೆಸಿದರು. ರಾಜ್ಯಕ್ಕೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಆಗಮಿಸಿದ್ದು, ನಾಳೆ ನಡೆಯಲಿರುವ ಕೋರ್ ಕಮಿಟಿ ಸಭೆಯಲ್ಲಿ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ವಿಷಯ ಚರ್ಚೆಗೆ ಬರುವ ಸಾಧ್ಯತೆ ಇದೆ. ಒಂದು ವೇಳೆ ಪ್ರಸ್ತಾಪವಾದಲ್ಲಿ ಸಹೋದರನ ಪರ ನಿಲುವು ವ್ಯಕ್ತಪಡಿಸುವಂತೆ ಸಿಎಂ ಯಡಿಯೂರಪ್ಪಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.