ಬೆಂಗಳೂರು:ರಾಜಧಾನಿ ಬೆಂಗಳೂರು ವ್ಯಾಪ್ತಿ 28 ವಿಧಾನಸಭಾ ಕ್ಷೇತ್ರಗಳ ಮತದಾರರ ಕರಡು ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಈ ಸಂಬಂಧ ಯಾವುದೇ ರೀತಿಯ ತಿದ್ದುಪಡಿ, ಆಕ್ಷೇಪಣೆಗಳನ್ನು ಸಲ್ಲಿಸಲು ಡಿಸೆಂಬರ್ 9ರ ವರೆಗೆ ಅವಕಾಶ ಕಲ್ಪಿಸಲಾಗಿದೆ. ಇದರ ಜೊತೆಗೆ ಹೊಸ ಹೆಸರು ಸೇರ್ಪಡೆಗೆ ವಿಶೇಷ ಅಭಿಯಾನ ನಡೆಸಲಾಗುತ್ತಿದೆ ಎಂದು ಜಿಲ್ಲಾ ಚುನಾವಣಾ ವಿಭಾಗದ ವಿಶೇಷ ಆಯುಕ್ತ ಆರ್ ರಾಮಚಂದ್ರನ್ ತಿಳಿಸಿದ್ದಾರೆ.
ಬೆಂಗಳೂರು ವ್ಯಾಪ್ತಿ 28 ವಿಧಾನಸಭಾ ಕ್ಷೇತ್ರಗಳಲ್ಲಿ ಅಕ್ಟೋಬರ್ 27 ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದೆ. ಈ ಸಂಬಂಧ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಡಿಸೆಂಬರ್ 9ರ ವರೆಗೆ ಅವಕಾಶ ಕಲ್ಪಿಸಲಾಗಿದೆ. ಈ ಅವಧಿಯಲ್ಲಿ ವಿಶೇಷ ಮತದಾರರ ನೋಂದಣಿ ಅಭಿಯಾನಗಳನ್ನು ಬಿಬಿಎಂಪಿ ಎಲ್ಲ ಕಂದಾಯ ಅಧಿಕಾರಿಗಳು, ಸಹ ಕಂದಾಯ ಅಧಿಕಾರಿಗಳು, ವಾರ್ಡ್ ಕಚೇರಿಗಳು, ಮತಗಟ್ಟೆಗಳಲ್ಲಿ ಹಮ್ಮಿಕೊಂಡಿದ್ದು, ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರಡು ಮತದಾರರ ಪಟ್ಟಿ ಬಿಡುಗಡೆ :ಮತದಾರರ ಪಟ್ಟಿಗಳ ವಿಶೇಷ ಪರಿಷ್ಕರಣೆ –2024 ರ ಕುರಿತು ಚುನಾವಣಾ ವಿಭಾಗದ ವಿಶೇಷ ಆಯುಕ್ತ ಆರ್. ರಾಮಚಂದ್ರನ್ ಅಕ್ಟೋಬರ್ 27 ರಂದು ಕರಡು ಮತದಾರರ ಪಟ್ಟಿ ಬಿಡುಗಡೆಗೊಳಿಸಿದ್ದರು. ಬೆಂಗಳೂರು ವ್ಯಾಪ್ತಿ ಬರುವ ಎಲ್ಲಾ 28 ವಿಧಾನಸಭಾ ಕ್ಷೇತ್ರಗಳಲ್ಲಿ ಪುರುಷ ಮತದಾರರು 50,61,883 ಜನ ಮಹಿಳಾ ಮತದಾರರು 47,26,856 ಮಂದಿ ಹಾಗೂ ಇತರೆ ಮತದಾರರು 1760 ಇದ್ದಾರೆ. ಒಟ್ಟು 97,09,499 ಮತದಾರರು ಇರುವ ಕರಡು ಪಟ್ಟಿಯನ್ನು ಬಿಡುಗಡೆಗೊಳಿಸಿದ್ದರು.