ಬೆಂಗಳೂರು: ರಾಜಧಾನಿ ಬೆಂಗಳೂರು ನಗರಕ್ಕೆ ದಕ್ಷ ಮತ್ತು ಆರ್ಥಿಕ ಲಾಭದಾಯಕ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಅಗತ್ಯವಿದೆ ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಬಳ್ಳಾರಿಯ ರಸ್ತೆ ಅಗಲೀಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಆದೇಶದಲ್ಲಿ ಜಾರಿ ಮಾಡಲು ನಿರ್ದೇಶನ ನೀಡಬೇಕು ಎಂದು ಕೋರಿ ನಗರದ ಸಮರ್ಪಣಾ ಸಾಮಾಜಿಕ ಸಾಂಸ್ಕೃತಿಕ ಟ್ರಸ್ಟ್ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಸಲ್ಲಿಸಿತ್ತು.
ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂ.ಜೆ.ಎಸ್ ಕಮಲ್ ಅವರಿದ್ದ ವಿಭಾಗಿಯ ಪೀಠ ಈ ಅಭಿಪ್ರಾಯ ಪಟ್ಟಿದೆ. ಹೆಚ್ಚಿನ ಪ್ರಮಾಣದ ನಾಗರಿಕರು ತಮ್ಮ ಸ್ವಂತ ವಾಹನಗಳಲ್ಲಿ ನಗರ ಪ್ರವೇಶ ಮಾಡುತ್ತಿದ್ದಾರೆ. ಇದನ್ನು ತಡೆಗಟ್ಟುವುದಕ್ಕಾಗಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಆರ್ಥಿಕವಾಗಿ ಲಾಭದಾಯಕ ಮತ್ತು ದಕ್ಷ ಗೊಳಿಸಬೇಕು ಹೆಚ್ಚಿನ ಬಸ್ ಸೇವೆ ಲಭ್ಯವಿರುವಂತೆ ಮಾಡಬೇಕು.
ಜತೆಗೆ, ಬೆಂಗಳೂರು ನಗರ ಸಂಚಾರಿ ದಟ್ಟಣೆಯಿಂದ ಸಾರ್ವಜನಿಕ ಸಾರಿಗೆಯ ಅಲಭ್ಯತೆಯು ವಾಹನಗಳ ಸಂಖ್ಯೆಯಲ್ಲಿ ಹೆಚ್ಚಳಕ್ಕೆ ಕಾರಣವಾಗಿದೆ. ಜತೆಗೆ ನಗರದ ರಸ್ತೆಗಳ ಅಗಲೀಕರಣ ಪ್ರಸ್ತುತ ಅತ್ಯಂತ ಅಗತ್ಯವಿದೆ ಎಂದು ಪೀಠ ಅಭಿಪ್ರಾಯ ಪಟ್ಟಿತು. ನಗರದ ರಸ್ತೆಗಳಲ್ಲಿ ದ್ವಿಚಕ್ರವಾಹನಗಳು ಕೆಲವೊಮ್ಮೆ ನಾಲ್ಕು ಚಕ್ರ ವಾಹನಗಳು ಸಹ ಏಕಮುಖ ರಸ್ತೆಗಳಲ್ಲಿ ವಿರುದ್ಧ ದಿಕ್ಕಿನಲ್ಲಿ ಸಂಚರಿಸುತ್ತವೆ. ಈ ವಿಚಾರದಲ್ಲಿ ನಾಗರಿಕರು ಸಹ ಸಮಾಜದ ಕರ್ತವ್ಯಕ್ಕೆ ಬದ್ಧರಾಗಿರಬೇಕು ಎಂದು ಮುಖ್ಯ ನ್ಯಾಯಮೂರ್ತಿಗಳು ಮೌಖಿಕವಾಗಿ ವಿವರಿಸಿದರು.