ಬೆಂಗಳೂರು: ಬೆಂಗಳೂರಲ್ಲಿ ನಿನ್ನೆ ಭಾರಿ ಮಳೆ ಸುರಿದು ಅವಾಂತರ ಸೃಷ್ಟಿಯಾದ ಹಿನ್ನೆಲೆ ಸಿಎಂ ಯಡಿಯೂರಪ್ಪ ಬಿಬಿಎಂಪಿ ಅಧಿಕಾರಿಗಳೊಂದಿಗೆ ಇಂದು ತುರ್ತು ಸಭೆ ನಡೆಸಿದರು.
ಕಾವೇರಿ ನಿವಾಸದಲ್ಲಿ ಸಿಎಂ ಯಡಿಯೂರಪ್ಪ ಅಧಿಕಾರಿಗಳ ಜೊತೆ ಸಭೆ ನಡೆಸಿ, ಮಳೆಹಾನಿಯ ಬಗ್ಗೆ ಮಾಹಿತಿ ಪಡೆದರು. ಮಳೆಯಿಂದ ನಗರದ ಯಾವ ಪ್ರದೇಶಗಳಲ್ಲಿ ಹಾನಿಯಾಗಿದೆ. ಹಾನಿಯ ಪ್ರಮಾಣ ಎಷ್ಟು?. ಪರಿಹಾರ ಕಾರ್ಯ, ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚೆ ನಡೆಸಿದರು.
ಇನ್ನೂ ಎರಡು ದಿನ ಬೆಂಗಳೂರಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಕಟ್ಟೆಚ್ಚರದಿಂದ ಇರುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದರು. ತಗ್ಗು ಪ್ರದೇಶಗಳಲ್ಲಿ ಇರುವ ಮನೆಗಳ ಬಗ್ಗೆ ಹೆಚ್ಚಿನ ನಿಗಾ ಇಡುವಂತೆ ಮತ್ತು ಯಾರಿಗೂ ಸಮಸ್ಯೆಯಾಗದಂತೆ ಕ್ರಮ ವಹಿಸಲು ಸೂಚಿಸಿದರು.