ಬೆಂಗಳೂರು: ಜಗತ್ತಿಗೆ ಬೆಳಕು ನೀಡಿದ ಶ್ರೀ ಬಸವೇಶ್ವರರ ಆದರ್ಶ, ತತ್ವಗಳನ್ನು ಪ್ರತಿಯೊಬ್ಬರೂ ಪಾಲಿಸುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದ್ದಾರೆ. ಮಹಾಲಕ್ಷ್ಮಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಾಗಪುರದಲ್ಲಿರುವ ಶಾಸಕರ ಕಚೇರಿಯಲ್ಲಿಂದು ಆಯೋಜಿಸಲಾಗಿದ್ದ ವಿಶ್ವಗುರು ಬಸವಣ್ಣ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಯಡಿಯೂರಪ್ಪ ಅವರು ಮುಖ್ಯಮಂತ್ರಿಗಳಾಗಿದ್ದ ವೇಳೆ ಬಸವ ಕಲ್ಯಾಣದಲ್ಲಿ 500 ಕೋಟಿ ರೂ. ವೆಚ್ಚದಲ್ಲಿ ಬಸವ ಕಲ್ಯಾಣ ಅಭಿವೃದ್ಧಿಗೆ ಮುಂದಾಗಿದ್ದರು. ಇಂದಿನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಈ ಅಭಿವೃದ್ಧಿಯನ್ನು ಮುಂದುವರಿಸಿದ್ದು, ಇದು ಪೂರ್ಣಗೊಂಡರೆ ಇಡೀ ದೇಶವೇ ಮೆಚ್ಚುವಂತಹ ಸ್ಮಾರಕ ಅಲ್ಲಿ ನಿರ್ಮಾಣವಾಗಲಿದೆ ಎಂದರು.