ಬೆಂಗಳೂರು: ಆಂಧ್ರದ ಶ್ರೀಶೈಲಂನಲ್ಲಿ ನಡೆದ ಘರ್ಷಣೆ ವೇಳೆ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ನಾನು ಈಗಾಗಲೇ ಆಂಧ್ರಪ್ರದೇಶದ ಅಧಿಕಾರಿಗಳ ಜೊತೆ ಮಾತನಾಡಿ ಸಂಪೂರ್ಣ ಮಾಹಿತಿ ಪಡೆದಿದ್ದೇನೆ. ಸದ್ಯಕ್ಕೆ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ನಾನು ಈಗಾಗಲೇ ಆಂಧ್ರಪ್ರದೇಶದ ಅಧಿಕಾರಿಗಳ ಜೊತೆ ಮಾತನಾಡಿ ಸಂಪೂರ್ಣ ಮಾಹಿತಿ ಪಡೆದಿದ್ದೇನೆ. ಸ್ಥಳೀಯರು ಮತ್ತು ಭಕ್ತರ ನಡುವೆ ಕ್ಷುಲ್ಲಕ ಕಾರಣಕ್ಕೆ ಉಂಟಾದ ಗಲಭೆ, ಕೊನೆಗೆ ಸಂಘರ್ಷಕ್ಕೆ ತಿರುಗಿ ಓರ್ವ ಸಾವನ್ನಪ್ಪಿದ್ದಾನೆ. ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡಲಾಗಿದೆ. ಸದ್ಯಕ್ಕೆ ಯಾವುದೇ ರೀತಿಯ ಪ್ರಾಣಾಪಾಯವಿಲ್ಲ ಎಂದು ಹೇಳಿದರು.
ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್‍ಮೋಹನ್ ರೆಡ್ಡಿ ಅವರ ಜೊತೆ ದೂರವಾಣಿ ಮೂಲಕ ಮಾತುಕತೆ ನಡೆಸುತ್ತೇನೆ. ಮುಂದೆ ಇಂತಹ ಘಟನೆಗಳು ಮರುಕಳುಹಿಸದಂತೆ ಎಲ್ಲರೂ ಎಚ್ಚರ ವಹಿಸಬೇಕಾದ ಅಗತ್ಯವಿದೆ. ಶ್ರೀಶೈಲಕ್ಕೆ ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ ಸೇರಿದಂತೆ ದೇಶದ ವಿವಿಧ ಭಾಗಗಳಿಂದ ದೊಡ್ಡ ಮಟ್ಟದಲ್ಲಿ ಭಕ್ತರು ಸೇರುತ್ತಾರೆ. ಭಕ್ತರು ಬಂದಾಗ ಇಂತಹ ಘಟನೆಗಳು ನಡೆಯಬಾರದು. ಏನೇ ಸಣ್ಣಪುಟ್ಟ ಗೊಂದಲಗಳಿದ್ದರೂ ನಾವೆಲ್ಲರೂ ಅನುಸರಿಸಿಕೊಂಡು ಹೋಗಬೇಕು ಎಂದರು.