ಬೆಂಗಳೂರು:ದೆಹಲಿ ಪ್ರವಾಸದಲ್ಲಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿನ್ನೆ ಅಮಿತ್ ಶಾ ಅವರನ್ನು ಭೇಟಿಯಾಗಿದ್ದು, ಇಂದು (ಬುಧವಾರ) ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾರನ್ನು ಭೇಟಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯ ರಾಜಕಾರಣದ ಕುರಿತು ಮಹತ್ವದ ಮಾತುಕತೆ ನಡೆಸಿದರು. ರಾಜ್ಯಾಧ್ಯಕ್ಷ ಮತ್ತು ಪ್ರತಿಪಕ್ಷ ನಾಯಕರ ಆಯ್ಕೆ ಕುರಿತು ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಭಾನುವಾರ ರಾತ್ರಿ ನವದೆಹಲಿಗೆ ತೆರಳಿರುವ ಬೊಮ್ಮಾಯಿ, ಹೈಕಮಾಂಡ್ ನಾಯಕರ ಭೇಟಿಗೆ ಸಾಕಷ್ಟು ಕಸರತ್ತು ನಡೆಸಿದ್ದರು. ಸೋಮವಾರ ಯಾವುದೇ ನಾಯಕರ ಭೇಟಿ ಮಾಡಲಾಗದೇ ಇದ್ದರೂ ಮಂಗಳವಾರ ಅಮಿತ್ ಶಾರನ್ನು ಭೇಟಿಯಾಗಿ ರಾಜ್ಯ ರಾಜಕೀಯದ ಕುರಿತು ಮಾತುಕತೆ ನಡೆಸಿದ್ದರು. ಈ ವೇಳೆ, ರಾಜ್ಯ ಬಿಜೆಪಿಗೆ ಹೊಸ ತಂಡ ರಚನೆ, ಪ್ರತಿಪಕ್ಷ ನಾಯಕರ ಆಯ್ಕೆ ಕುರಿತು ಮಾತುಕತೆ ನಡೆದಿತ್ತು.
ರಾಷ್ಟ್ರೀಯ ಅಧ್ಯಕ್ಷರ ಭೇಟಿಯಲ್ಲೂ ಬೊಮ್ಮಾಯಿ, ಪ್ರತಿಪಕ್ಷ ನಾಯಕರ ಆಯ್ಕೆ ವಿಚಾರದ ಕಗ್ಗಂಟು ಕುರಿತು ಚರ್ಚಿಸಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್, ಆರ್.ಅಶೋಕ್, ಅಶ್ವತ್ಥನಾರಾಯಣ್, ಸುನೀಲ್ ಕುಮಾರ್ ಪ್ರಮುಖ ಆಕಾಂಕ್ಷಿಗಳಾಗಿದ್ದು, ಬಸವರಾಜ ಬೊಮ್ಮಾಯಿ ಪರವೇ ಯಡಿಯೂರಪ್ಪ ಒಲವು ಹೊಂದಿದ್ದಾರೆ. ಹೀಗಾಗಿ ಈ ವಿಚಾರದ ಕುರಿತೂ ಮಾತುಕತೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.