ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಡೆಯುವ ಬೆಂಗಳೂರು ಐತಿಹಾಸಿಕ ಕರಗ ಉತ್ಸವ-2022 ಸಂಬಂಧ ಇಂದು ಮುಖ್ಯ ಆಯುಕ್ತ ಗೌರವ್ ಗುಪ್ತ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಿದ್ಧತಾ ಸಭೆ ನಡೆಯಿತು.
ಮುಖ್ಯ ಆಯುಕ್ತ ಗೌರವ್ ಗುಪ್ತ ಮಾತನಾಡಿ, ಬೆಂಗಳೂರಿನ ಐತಿಹಾಸಿಕ ಕರಗ ಉತ್ಸವವು ಏಪ್ರಿಲ್ 8ರಿಂದ ಪ್ರಾರಂಭವಾಗಲಿದ್ದು, ಏಪ್ರಿಲ್ 16 ರಂದು ಕರಗ ಶಕ್ತ್ಯೋತ್ಸವ ನಡೆಯಲಿದೆ. ಏಪ್ರಿಲ್ 18 ರಂದು ವಸಂತೋತ್ಸವ ಧ್ವಜಾರೋಹಣದ ಮೂಲಕ ಕರಗ ಮಹೋತ್ಸವ ಮುಕ್ತಾಯವಾಗಲಿದೆ. ಸಹಸ್ರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಸೇರಲಿದ್ದು, ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಪಾಲಿಕೆ, ಜಿಲ್ಲಾಧಿಕಾರಿ, ಮುಜರಾಯಿ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಶಾಸಕ ಉದಯ್ ಬಿ.ಗರುಡಾಚಾರ್ ಮಾತನಾಡಿ, ಕರಗ ಉತ್ಸವ ಕೋವಿಡ್ ಕಾರಣ ಎರಡು ವರ್ಷ ವಿಜೃಂಭಣೆಯಿಂದ ಆಚರಿಸಲಾಗಿಲ್ಲ. ಆರೋಗ್ಯದ ಹಿತದೃಷ್ಟಿಯಿಂದ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಈ ಬಾರಿ ಸುವ್ಯವಸ್ಥಿತವಾಗಿ ನಡೆಯಬೇಕು ಎಂದು ತಿಳಿಸಿದರು.