ಬೆಂಗಳೂರು: ಪ್ರತೀ ವರ್ಷ ಮತದಾರ ಪಟ್ಟಿ ಪರಿಷ್ಕರಣೆ ಮಾಡಲಾಗುತ್ತದೆ. ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಯ ಶುದ್ಧೀಕರಣವನ್ನು ಅಧಿಕಾರಿಗಳು ಸರಿಯಾಗಿ ಮಾಡಿದ್ದಾರೆಯೇ ಇಲ್ಲವೇ ಎಂಬುದನ್ನು ಪರಿಶೀಲಿಸಲು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮನೆ-ಮನೆಗೆ ಭೇಟಿ ನೀಡಿ ಮತದಾರರ ಪಟ್ಟಿ ಪರಿಶೀಲನೆ ನಡೆಸಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯ ಕಾರ್ಯಗಳನ್ನು ನಡೆಸಲಾಗಿದ್ದು, ನ.9ರಂದು ಮತದಾರರ ಪಟ್ಟಿಯ ಕರಡು ಪ್ರತಿಯನ್ನು ಪ್ರಕಟಿಸಲಾಗಿತ್ತು. ಕರಡು ಮತದಾರರ ಪಟ್ಟಿಯಲ್ಲಿ ಹೆಸರು ಬಿಟ್ಟುಹೋಗಿದ್ದಲ್ಲಿ, ತಪ್ಪಾಗಿದ್ದಲ್ಲಿ, ತಪ್ಪಾಗಿ ಸೇರ್ಪಡೆಗೊಂಡಿದ್ದಲ್ಲಿ ಮತ್ತು ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕಲು ನಮೂನೆ-6, 7 ಮತ್ತು 8 ರಲ್ಲಿ ತಮ್ಮ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಭಾರತ ಚುನಾವಣಾ ಆಯೋಗವು ನ.9 ರಿಂದ ಡಿ. 8 ರವರಗೆ ಅವಕಾಶ ಕಲ್ಪಿಸಿತ್ತು. ಈ ವೇಳೆ ಎಲ್ಲಾ ಬಿಎಲ್ಓ ಮೇಲ್ವಿಚಾರಕರು ಮನೆ ಮನೆಗೆ ಭೇಟಿ ನೀಡಿ ಮತದಾರರ ಪಟ್ಟಿ ಶುದ್ಧೀಕರಿಸುವ ಕಾರ್ಯ ಮಾಡಿದ್ದಾರೆ.
ನಂತರ, ಭಾರತ ಚುನಾವಣಾ ಆಯೋಗದ ನಿದೇರ್ಶನದಂತೆ ಮತದಾರರ ಪಟ್ಟಿ ಪರಿಷ್ಕರಣೆ ಮಾಡಿರುವುದನ್ನು ಜಿಲ್ಲಾ ಚುನಾವಣಾ ಅಧಿಕಾರಿ, ಅಪರ ಜಿಲ್ಲಾ ಚುನಾವಣಾ ಅಧಿಕಾರಿಗಳು ಕೆಲ ಮನೆಗಳಿಗೆ ಭೇಟಿ ನೀಡಿ ಮತದಾರರ ಪಟ್ಟಿ ಪರಿಷ್ಕರಣೆ ಮಾಡಿರುವ ಬಗ್ಗೆ ಸೂಪರ್ ಚೆಕ್ಕಿಂಗ್ ಮಾಡುತ್ತಾರೆ. ಅದರಂತೆ ಬುಧವಾರ ಮುಖ್ಯ ಆಯುಕ್ತರು ಗೋವಿಂದರಾಜ ನಗರದ ಗಂಗಮ್ಮ ತಿಮ್ಮಯ್ಯ ಕಲ್ಯಾಣ ಮಂಟಪದ ಸುತ್ತಮುತ್ತಲಿನ ಮನೆಗಳು ಹಾಗೂ ವಿಜಯನಗರ ವ್ಯಾಪ್ತಿಯಲ್ಲಿ ಕೆಲ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.