ಕರ್ನಾಟಕ

karnataka

ETV Bharat / state

ಸಿಎಂ ಭೇಟಿ ಮಾಡಿದ ಬಿಬಿಎಂಪಿ ಗುತ್ತಿಗೆದಾರರ ಸಂಘ: ಬಾಕಿ ಬಿಲ್ ಬಿಡುಗಡೆಗೆ ಮನವಿ - ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಕಿ ಬಿಲ್ ಪಾವತಿಗೆ ಆಗ್ರಹಿಸಿ ಬಿಬಿಎಂಪಿ ಗುತ್ತಿಗೆದಾರರ ಸಂಘ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದೆ.

BBMP Contractors Association meets CM Siddaramaiah
ಸಿಎಂ ಭೇಟಿ ಮಾಡಿದ ಬಿಬಿಎಂಪಿ ಗುತ್ತಿಗೆದಾರರ ಸಂಘ

By

Published : Aug 8, 2023, 2:32 PM IST

ಬೆಂಗಳೂರು:ಗೃಹ ಕಚೇರಿ ಕೃಷ್ಣಾದಲ್ಲಿ ಬಿಬಿಎಂಪಿ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಬಾಕಿ ಬಿಲ್ ಬಿಡುಗಡೆಗೆ ಮನವಿ ಮಾಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ಕಳೆದ 28 ತಿಂಗಳ ಹಿಂದೆ ಪೂರ್ಣಗೊಳಿಸಿರುವ ಕಾಮಗಾರಿಗಳ ಬಿಲ್ ಪಾವತಿ ಬಾಕಿ ಇರುತ್ತದೆ. ಚುನಾವಣೆ, ಹೊಸ ಸರ್ಕಾರ ರಚನೆ ಹೀಗೆ 8 ತಿಂಗಳಿನಿಂದ ಬಾಕಿ ಮೊತ್ತ ಬಿಡುಗಡೆ ಆಗಿರುವುದಿಲ್ಲ. ಇದರಿಂದ ಗುತ್ತಿಗೆದಾರರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿದ್ದಾರೆ ಎಂದು ಅವರು ಅಳಲು ತೋಡಿಕೊಂಡರು.

ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಎದುರಾಗುತ್ತದೆ ಎಂಬ ವಿಷಯವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದೆ ಎಂದು ಸಂಘದ ಅಧ್ಯಕ್ಷ ಆರ್.ಅಂಬಿಕಾಪತಿ ತಿಳಿಸಿದರು. ಸರ್ಕಾರದಿಂದ ಬಿಡುಗಡೆ ಆಗಿರುವ ಅನುದಾನ ಪಾಲಿಕೆಯ ಖಜಾನೆಯಲ್ಲಿ ಇದ್ದರೂ ಗುತ್ತಿಗೆದಾರರಿಗೆ ಬಾಕಿ ಬಿಡುಗಡೆ ಆಗುತ್ತಿಲ್ಲ ಎಂಬುದನ್ನು ಗಮನಕ್ಕೆ ತಂದಾಗ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿ ಬಿಲ್ ಪಾವತಿ ಸಂಬಂಧ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮತ್ತು ಮತ್ತು ಮುಖ್ಯ ಆಯುಕ್ತರೊಂದಿಗೆ ಚರ್ಚಿಸಿ ಆದಷ್ಟೂ ತ್ವರಿತವಾಗಿ ಬಾಕಿ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದರು ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳಾದ ಜಿ.ಎಂ. ರವೀಂದ್ರ, ನಂದಕುಮಾರ್ ಜಿ.ಎಂ. ಡಿ.ಎಂ.ನಾಗರಾಜ್, ಹನುಮಂತಯ್ಯ ಮೊದಲಾದವರು ಉಪಸ್ಥಿತರಿದ್ದರು. ಬಿಬಿಎಂಪಿ ಗುತ್ತಿಗೆದಾರರ ಸಂಘ ನಿನ್ನೆ ಸುದ್ದಿಗೋಷ್ಠಿ ನಡೆಸಿ, 2023-24ನೇ ಸಾಲಿನಲ್ಲಿ ಬಿಬಿಎಂಪಿ ಬಳಿ ₹ 2 ಸಾವಿರ ಕೋಟಿ ತೆರಿಗೆ ಮೊತ್ತ ಮತ್ತು ಸರ್ಕಾರ ನೀಡಿರುವ ₹ 675 ಕೋಟಿ ಅನುದಾನವಿದ್ದರೂ 26 ತಿಂಗಳಿಂದ ಗುತ್ತಿಗೆದಾರರು ನಿರ್ವಹಿಸಿದ ಕಾಮಗಾರಿಗಳಿಗೆ ಹಣ ಪಾವತಿಸುತ್ತಿಲ್ಲ ಎಂದು ದೂರಿದ್ದರು.

ಗುತ್ತಿಗೆದಾರರು ನಿರ್ವಹಿಸಿದ ಕಾಮಗಾರಿಗಳಿಗೆ ಸಕಾಲದಲ್ಲಿ ಬಿಲ್‌ ಪಾವತಿಯಾಗದೇ ಸಾಲದ ಸುಳಿಯಲ್ಲಿ ಸಿಲುಕಿದ್ದಾರೆ. ಕೆಲವರು ದಯಾಮರಣ ಕೋರಿ ರಾಷ್ಟ್ರಪತಿ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಬಿಲ್‌ ಪಾವತಿಸಲು ಒತ್ತಾಯಿಸಿದರೆ ತನಿಖೆ ಕೈಗೊಳ್ಳುತ್ತೇನೆ ಎಂದು ಬೆದರಿಕೆ ಹಾಕುತ್ತಿದ್ದಾರೆ. ಆದ್ದರಿಂದ, ಸೋಮವಾರದಿಂದಲೇ ಎಲ್ಲ ಕಾಮಗಾರಿಗಳನ್ನು ಸ್ಥಗಿತಗೊಳಿಸಲಾಗಿದೆ. ಬಿಬಿಎಂಪಿಯಲ್ಲಿ ಹಣದ ಲಭ್ಯತೆ ಇದ್ದರೂ ಬಿಡುಗಡೆ ಮಾಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಹೆಚ್​ಡಿಕೆ ಭೇಟಿಯಾಗಿ ಅಳಲು ತೋಡಿಕೊಂಡ ಗುತ್ತಿಗೆದಾರರು:ಕಳೆದ 26 ತಿಂಗಳಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿ ತಾವು ಮಾಡಿರುವ ಕಾಮಗಾರಿಗಳ ಬಾಕಿ ಬಿಲ್ ಪಾವತಿ ಮಾಡದಿರುವ ಕುರಿತು ಬೆಂಗಳೂರು ಮಹಾನಗರ ಪಾಲಿಕೆ ಕಾರ್ಯನಿರತ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ನಿನ್ನೆ (ಸೋಮವಾರ) ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಅಳಲು ತೋಡಿಕೊಂಡಿದ್ದರು.

ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಂಜುನಾಥ್ ನೇತೃತ್ವದಲ್ಲಿ ಕುಮಾರಸ್ವಾಮಿ ಅವರನ್ನು ಭೇಟಿಯಾದ ಗುತ್ತಿಗೆದಾರರು, ''ಪಾಲಿಕೆಯ ಮುಖ್ಯ ಆಯುಕ್ತರು ಬಿಲ್ ಪಾವತಿಗೆ ಮೀನಮೇಷ ಎಣಿಸುತ್ತಿದ್ದಾರೆ. ಬಿಲ್ ಬಾಕಿ ಉಳಿಸಿಕೊಂಡು, ಈಗ ತನಿಖೆ ಆಗಬೇಕು ಅಂತಿದ್ದಾರೆ. ಬಿಬಿಎಂಪಿ ಮುಖ್ಯ ಆಯುಕ್ತರು ಸ್ಪಂದಿಸುತ್ತಿಲ್ಲ'' ಎಂದು ದೂರಿದ್ದರು.

ಇದನ್ನೂ ಓದಿ:'ಹಣ ಬಿಡುಗಡೆಗೆ ಬಿಬಿಎಂಪಿ ವಿಳಂಬ': ಹೆಚ್​ಡಿಕೆ ಭೇಟಿಯಾಗಿ ಅಳಲು ತೋಡಿಕೊಂಡ ಗುತ್ತಿಗೆದಾರರು

ABOUT THE AUTHOR

...view details