ಬೆಂಗಳೂರು:ಹೊಸಕೆರೆಹಳ್ಳಿ ಕೆರೆಯ ಮಧ್ಯಭಾಗದಲ್ಲಿ ರಸ್ತೆ ನಿರ್ಮಿಸಿದ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಇಬ್ಬರು ಅಭಿಯಂತರರನ್ನು ಅಮಾನತು ಮಾಡಲಾಗಿದೆ. ಘನ ತ್ಯಾಜ್ಯ ನಿರ್ವಹಣೆ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಹೆಚ್.ಎಸ್ ಮೇಘಾ ಹಾಗೂ ಸಹಾಯಕ ಎಂಜಿನಿಯರ್ ಶಿಲ್ಪಾ ಅವರನ್ನು ಅಮಾನತುಗೊಳಿಸಿ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಆದೇಶ ಹೊರಡಿಸಿದ್ದಾರೆ.
ಅಧಿಕಾರಿಗಳ ಅಮಾನತಿಗೆ ಡಿಸಿಎಂ ಸೂಚನೆ:ವಿಧಾನಸೌಧದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು, ಹೊಸಕೆರೆಹಳ್ಳಿ ಕೆರೆಯಲ್ಲಿ ರಸ್ತೆ ನಿರ್ಮಾಣಕ್ಕೆ ಕಾರಣರಾದವರ ಕುರಿತು ಮಾಹಿತಿ ಕೇಳಿದ್ದರು. ಅಧಿಕಾರಿಗಳು ಇದಕ್ಕೆ ಉತ್ತರಿಸಲು ತಡಬಡಾಯಿಸಿದ್ದರು. ತಕ್ಷಣವೇ ಉಪ ಮುಖ್ಯಮಂತ್ರಿಗಳು ಹೊಸಕೆರೆಹಳ್ಳಿ ಕೆರೆ ಭಾಗ ಮಾಡಿ ರಸ್ತೆ ನಿರ್ಮಾಣ ಮಾಡಿದ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಸೂಚನೆ ನೀಡಿದ್ದರು.
ಪ್ರಭಾವಿ ಅಪಾರ್ಟ್ಮೆಂಟ್ ಮಾಲೀಕರಿಗೆ ಅನುಕೂಲ ಮಾಡಿಕೊಡಲು ಹೊಸಕೆರೆಹಳ್ಳಿ ಕೆರೆ ಮಧ್ಯೆ ರಸ್ತೆ ನಿರ್ಮಾಣ ಯೋಜನೆ ರೂಪಿಸಿದ, ಅನುಷ್ಠಾನಕ್ಕೆ ತಂದ ಎಲ್ಲ ಅಧಿಕಾರಿಗಳು, ಇಂಜಿನಿಯರ್ಗಳನ್ನು ಸಂಜೆ ಒಳಗೆ ಸೇವೆಯಿಂದ ಅಮಾನತು ಮಾಡುವಂತೆ ಡಿಸಿಎಂ ಡಿಕೆಶಿ ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್ ಅವರಿಗೆ ತಾಕೀತು ಮಾಡಿದ್ದರು. ಡಿಸಿಎಂ ಸೂಚನೆ ಬೆನ್ನಲ್ಲೇ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಈ ಕೆರೆ ಮಧ್ಯೆ ರಸ್ತೆ ನಿರ್ಮಾಣ ಮಾಡುವ ಐಡಿಯಾ ಕೊಟ್ಟವರು ಯಾರು? ಯೋಜನೆ ರೂಪಿಸಿದವರು ಯಾರು? ಅನುಷ್ಠಾನಕ್ಕೆ ತಂದವರು ಯಾರು? ಯಾಕಾಗಿ ಇದನ್ನು ಮಾಡಿದಿರಿ? ಯಾರಿಗೆ ಅನುಕೂಲ ಮಾಡಿಕೊಡಲು ಮಾಡಿದಿರಿ? ಯಾರ್ಯಾರು ಇದರಲ್ಲಿ ಭಾಗಿಯಾಗಿದ್ದೀರಿ ಎಂದು ಶಿವಕುಮಾರ್ ಅವರು ಸಭೆಯಲ್ಲಿ ಪ್ರಶ್ನಿಸಿದ್ದರು.