ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಮಕ್ಕಳಲ್ಲಿ ಕೊರೊನಾ ಸೋಂಕಿನ ಪ್ರಮಾಣ ಹೆಚ್ಚಾಗಿಲ್ಲ. ಬಹುತೇಕ ಮಕ್ಕಳಲ್ಲಿ ಸೌಮ್ಯ ಮತ್ತು ಮಧ್ಯಮ ಲಕ್ಷಣಗಳು ಮಾತ್ರ ಕಂಡುಬರುತ್ತಿದ್ದು, ಮನೆಯಲ್ಲೇ ಗುಣಮುಖರಾಗುತ್ತಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾದವರ ಸಂಖ್ಯೆ ತೀರಾ ಕಡಿಮೆಯಿದೆ. ಈ ಸಂಬಂಧ ಈಗಾಗಲೇ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳಿಗೆ ಮಾರ್ಗಸೂಚಿ ಹೊರಡಿಸಲಾಗಿದ್ದು, ಮಕ್ಕಳ ಮೇಲೆ ನಿಗಾವಹಿಸಲು ಸೂಚನೆ ನೀಡಲಾಗಿದೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ ರಂದೀಪ್ ಹೇಳಿದರು.
ನಗರದಲ್ಲಿಂದು ಡಾ.ಬಾಬು ಜಗಜೀವನ್ ರಾಮ್ ಸಾರ್ವಜನಿಕ ಆಸ್ಪತ್ರೆಗೆ ವೈದ್ಯಕೀಯ ಉಪಕರಣ(ಮಕ್ಕಳ ಸೌಲಭ್ಯಗಳ ಉಪಯೋಗಕ್ಕಾಗಿ)ಗಳನ್ನು ಶಿಲ್ಪಾ ಸಿಂಗ್ ಮತ್ತು ಪಾರ್ಸಿಯಾ ಸಿಂಗ್ ರಂದೀಪ್ ಅವರಿಗೆ ಹಸ್ತಾಂತರಿಸಿದರು.
ಈ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಂದೀಪ್, ಕೋವಿಡ್ ಸಮಯದಲ್ಲಿ ಡಾ.ಜಗಜೀವನ್ ರಾಮ್ ಆಸ್ಪತ್ರೆಯಲ್ಲಿ ಫೀವರ್ ಕ್ಲಿನಿಕ್, ಟ್ರಯಾಜ್ ಸೆಂಟರ್ ಪ್ರಾರಂಭಿಸಲಾಗಿದೆ. ಅಲ್ಲದೆ ಇದೀಗ 30 ಹಾಸಿಗೆ ಸಾಮರ್ಥ್ಯದ ಮಕ್ಕಳ ಆರೈಕೆ ಕೇಂದ್ರವನ್ನು ಸ್ಥಾಪಿಸಲಾಗಿದೆ. ಅದರಲ್ಲಿ 2 ಐಸಿಯು ಹಾಸಿಗೆ, 8 ಹೆಚ್ಡಿಯು ಹಾಸಿಗೆ, 20 ಆಮ್ಲಜನಕಯುಕ್ತ ಹಾಸಿಗೆಗಳ ವ್ಯವಸ್ಥೆಯಿದ್ದು, ಸೌಮ್ಯ ಮತ್ತು ಮಧ್ಯಮ ಕೋವಿಡ್ ಸೋಂಕು ಲಕ್ಷಣಗಳಿರುವ ಮಕ್ಕಳಿಗೆ ಚಿಕಿತ್ಸೆ ನೀಡಲಾಗುವುದು ಎಂದರು.