ಬೆಂಗಳೂರು: ಕೃಷಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಹಣಕಾಸು ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಶೀಘ್ರದಲ್ಲೇ ಭರ್ತಿ ಮಾಡಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.
ಪ್ರಶ್ನೋತ್ತರ ವೇಳೆ ಜೆಡಿಎಸ್ ಸದಸ್ಯ ಹೆಚ್.ಡಿ. ರೇವಣ್ಣ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೃಷಿ ಇಲಾಖೆಯಲ್ಲಿ 8,141 ಹುದ್ದೆಗಳಿವೆ. ಈ ಪೈಕಿ 4,293 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ, 3,851 ಹುದ್ದೆಗಳು ಖಾಲಿ ಇವೆ. ಆಡಳಿತಕ್ಕೆ ತೊಂದರೆಯಾಗಬಾರದೆಂಬ ಉದ್ದೇಶದಿಂದ ಹೊರಗುತ್ತಿಗೆ ಆಧಾರದ ಮೇಲೆ 2,255 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಖಾಲಿ ಇರುವ ಹುದ್ದೆಗಳನ್ನು ಕೆಪಿಎಸ್‍ಸಿ ಮೂಲಕ ಭರ್ತಿ ಮಾಡಲು ತೀರ್ಮಾನಿಸಿದ್ದೇವೆ. ಈ ಸಂಬಂಧ ಹಣಕಾಸು ಇಲಾಖೆ ಅಧಿಕಾರಿಗಳೊಂದಿಗೆ ಪತ್ರ ವ್ಯವಹಾರ ನಡೆದಿದೆ. ಅನುಮತಿ ಸಿಕ್ಕಿದ ಕೂಡಲೇ ಭರ್ತಿ ಮಾಡಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು. ಇದಕ್ಕೆ ಆಕ್ಷೇಪಿಸಿದ ಹೆಚ್.ಡಿ.ರೇವಣ್ಣ, ಹುದ್ದೆಗಳು ಅರ್ಧಕ್ಕರ್ದ ಖಾಲಿ ಇದ್ದರೆ ಇಲಾಖೆಯಲ್ಲಿ ಹೇಗೆ ಕೆಲಸ ಮಾಡಲು ಸಾಧ್ಯ ಎಂದು ಪ್ರಶ್ನಿಸಿದರು.
ಮಾನದಂಡಗಳಿಗೆ ಅನುಸಾರವಾಗಿಯೇ ಸಾರಿಗೆ ಕಚೇರಿ ಆರಂಭ : ಯಾವುದೇ ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಪ್ರಾದೇಶಿಕ ಸಾರಿಗೆ ಕಚೇರಿಗಳನ್ನು ತೆರೆಯಲು ಮಾನದಂಡಗಳಿದ್ದು, ಆ ಮಾನದಂಡಗಳಿಗೆ ಅನುಸಾರವಾಗಿಯೇ ಸಾರಿಗೆ ಕಚೇರಿಗಳನ್ನು ಆರಂಭಿಸಲಾಗುತ್ತಿದೆ ಎಂದು ಸಾರಿಗೆ ಸಚಿವರೂ ಆದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆ ತಿಳಿಸಿದರು. ಕಾಂಗ್ರೆಸ್ ಸದಸ್ಯ ಶಿವಾನಂದ ಎಸ್. ಪಾಟೀಲ್ ಅವರ ಪ್ರಶ್ನೆಗೆ ಅವರು ಉತ್ತರಿಸಿದರು.