ಬೆಂಗಳೂರು: ಬೆಳಗಾವಿ ಜಿಲ್ಲೆಯ ಗ್ರಾಮವೊಂದರಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಅಮಾನವೀಯವಾಗಿ ಹಲ್ಲೆ ನಡೆಸಿದ್ದ ಪ್ರಕರಣದ ತನಿಖೆ ಪೂರ್ಣಗೊಳಿಸಿರುವ ಪೊಲೀಸರು ಜನವರಿ ಅಂತ್ಯದಲ್ಲಿ ಅಂತಿಮ ವರದಿ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿರುವುದಾಗಿ ಹೈಕೋರ್ಟ್‌ಗೆ ರಾಜ್ಯ ಸರ್ಕಾರ ತಿಳಿಸಿದೆ.
ಪ್ರಕರಣ ಕುರಿತ ಸ್ವಯಂಪ್ರೇರಿತ ಅರ್ಜಿ ದಾಖಲಿಸಿಕೊಂಡು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ನ್ಯಾಯಪೀಠಕ್ಕೆ ಸರ್ಕಾರ ಈ ಮಾಹಿತಿ ನೀಡಿತು. ವಿಚಾರಣೆ ವೇಳೆ ಹಾಜರಾಗಿದ್ದ ಸರ್ಕಾರದ ಪರ ಹೆಚ್ಚುವರಿ ಅಡ್ವೊಕೇಟ್ ಜನರಲ್ ಪ್ರತಿಮಾ ಹೊನ್ನಾಪುರ, ಮೆಮೋ ಸಲ್ಲಿಸಿದರು.
ಮೆಮೋದಲ್ಲಿ ಪ್ರಕರಣದ ಎಲ್ಲಾ ಸಾಕ್ಷಿಗಳು, ಆರೋಪಿಗಳ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ. ಆರೋಪಿಗಳನ್ನು ಬಂಧಿಸಲಾಗಿದೆ. ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿರುವ ಮಾದರಿಗಳ ವರದಿಗಾಗಿ ಕಾಯಲಾಗುತ್ತಿದೆ. ತನಿಖೆ ಪೂರ್ಣಗೊಳ್ಳುವ ಹಂತದಲ್ಲಿದೆ. ತಿಂಗಳಾಂತ್ಯಕ್ಕೆ ಅಂತಿಮ ವರದಿ ಸಲ್ಲಿಸಲಾಗುತ್ತದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ಇದೇ ವೇಳೆ, ಸಂತ್ರಸ್ತೆಯ ಭದ್ರತೆ ವಿಚಾರವಾಗಿ ಒಂದು ಕೆಎಸ್‌ಆರ್‌ಪಿ ತುಕಡಿ, ಸಶಸ್ತ್ರಪಡೆಯ ಸಿಬ್ಬಂದಿ ಹಾಗೂ ಸ್ಥಳೀಯ ಪೊಲೀಸರನ್ನು ನಿಯೋಜಿಸಲಾಗಿತ್ತು ಅವರು ಭೇಟಿ ನೀಡುತ್ತಿದ್ದಾರೆ ಎಂದು ಪೀಠಕ್ಕೆ ಮಾಹಿತಿ ಒದಗಿಸಿದರು.