ಬೆಂಗಳೂರು :ಬೆಳ್ತಂಗಡಿ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಯನ್ನು ಖುಲಾಸೆಗೊಳಿಸಿ ಸಿಬಿಐ ವಿಶೇಷ ನ್ಯಾಯಾಲಯ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಸಿಬಿಐ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದೆ. 2012ರ ಅಕ್ಟೋಬರ್ 12ರಂದು ವಿದ್ಯಾರ್ಥಿನಿ ಅತ್ಯಾಚಾರ ಮತ್ತು ಕೊಲೆ ಪ್ರಕರಣ ನಡೆದಿತ್ತು. ಬೆಳ್ತಂಗಡಿ ಪೊಲೀಸರು ಸಂತೋಷ್ರಾವ್ನನ್ನು ಬಂಧಿಸಿದ್ದರು. ಸಿಬಿಐ ವಿಶೇಷ ನ್ಯಾಯಾಲಯದ ಆದೇಶ ಹೊರಬಿದ್ದು, 4 ತಿಂಗಳ ಬಳಿಕ ಸಿಬಿಐ ಮೇಲ್ಮನವಿ ಸಲ್ಲಿಸಿದ್ದು, ಈ ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.
ಪ್ರಕರಣದ ಆರೋಪಿಯಾಗಿರುವ ಸಂತೋಷ್ರಾವ್ ನಿರ್ದೂಷಿ ಎಂದು ಸಿಬಿಐ ವಿಶೇಷ ನ್ಯಾಯಾಲಯ 2023ರ ಜೂನ್ 16ರಂದು ತೀರ್ಪು ನೀಡಿತ್ತು. ಮೇಲ್ಮನವಿ ಸಲ್ಲಿಸಲು ಸಿಬಿಐಗೆ 60 ದಿನಗಳ ಕಾಲಾವಕಾಶ ಸಹ ನೀಡಲಾಗಿತ್ತು. ಆದರೆ, 4 ತಿಂಗಳ ಬಳಿಕ ಸಿಬಿಐ ಮೇಲ್ಮನವಿ ಸಲ್ಲಿಸಿದೆ.
ಪ್ರಕರಣ ಸಂಬಂಧ ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ 11 ವರ್ಷಗಳ ಬಳಿಕ ಆರೋಪಿ ನಿರ್ದೂಷಿ ಎಂದು ಸಿಬಿಐ ವಿಚಾರಣಾ ನ್ಯಾಯಾಲಯ ತೀರ್ಪು ನೀಡಿತ್ತು. ಈ ಮಧ್ಯೆ ಪ್ರಕರಣದ ಮರು ತನಿಖೆಗೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು.
ಪ್ರಕರಣದ ಹಿನ್ನೆಲೆ ಏನು ?:2012ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿದ ಘಟನೆ ನಡೆದಿತ್ತು. ಪ್ರಕರಣವನ್ನು ಮೊದಲಿಗೆ ಬೆಳ್ತಂಗಡಿ ಠಾಣೆ ಪೊಲೀಸರು ತನಿಖೆ ನಡೆಸಿದ್ದರು. ಬಳಿಕ ತನಿಖೆಯನ್ನು ಸಿಐಡಿಗೆ ವಹಿಸಲಾಗಿತ್ತು. 2013ರ ನವೆಂಬರ್ 6ರಂದು ಸರ್ಕಾರವು ಸಿಬಿಐಗೆ ತನಿಖೆಗೆ ಆದೇಶಿಸಿತ್ತು. ತನಿಖಾಧಿಕಾರಿಗಳು ಕಾರ್ಕಳ ಮೂಲದ ಸಂತೋಷ್ ರಾವ್ ಎಂಬಾತನನ್ನು ಆರೋಪಿಯಾಗಿ ಗುರುತಿಸಿದ್ದರು. ಸಿಬಿಐ ವಿಶೇಷ ನ್ಯಾಯಾಲಯವು 2023ರ ಜುಲೈ 16ರಂದು ಆರೋಪಿಯನ್ನು ಖುಲಾಸೆಗೊಳಿಸಿತ್ತು.
ಇದನ್ನೂ ಓದಿ:ಬೆಳ್ತಂಗಡಿ ವಿದ್ಯಾರ್ಥಿನಿ ಅತ್ಯಾಚಾರ ಕೊಲೆ ಪ್ರಕರಣ: ಮರು ತನಿಖೆ ಕೋರಿದ್ದ ಅರ್ಜಿ ವಜಾ