ಬೆಂಗಳೂರು : ನಗರದ ನಾಗವಾರದ ಬಳಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಬಿದ್ದು ತಾಯಿ ಹಾಗೂ ಮಗು ಮೃತಪಟ್ಟ ಪ್ರಕರಣಕ್ಕೆ 10 ಕೋಟಿ ರೂ. ನಷ್ಟ ಪರಿಹಾರ ನೀಡಲು ಆದೇಶಿಸುವಂತೆ ಕೋರಿ ಮೃತ ಮಹಿಳೆಯ ಪತಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಲೋಹಿತ್ ಕುಮಾರ್ ವಿ. ಸುಲಾಖೆ ಸಲ್ಲಿಸಿದ್ದ ತಕರಾರು ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ಪೀಠ ವಿಚಾರಣೆ ನಡೆಸಿತು.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದ (ಬಿಎಂಆರ್‌ಸಿಎಲ್) ವ್ಯವಸ್ಥಾಪಕ ನಿರ್ದೇಶಕರು, ಬೆಂಗಳೂರು ಜಿಲ್ಲಾಧಿಕಾರಿ ಹಾಗೂ ಮೆಟ್ರೋ ಕಾಮಗಾರಿ ಗುತ್ತಿಗೆದಾರ ಕಂಪನಿಯಾದ ಮೆರ್ಸಸ್ ನಾಗಾರ್ಜುನ ಕನ್‌ಸ್ಟ್ರಕ್ಷನ್ ವ್ಯವಸ್ಥಾಪಕ ನಿರ್ದೇಶಕರು ಸೇರಿದಂತೆ ಅರ್ಜಿಯಲ್ಲಿನ 8 ಮಂದಿ ಪ್ರತಿವಾದಿಗಳಿಗೆ ತುರ್ತು ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಎರಡು ವಾರ ಕಾಲ ಮುಂದೂಡಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ''ಲೋಹಿತ್ ಕುಮಾರ್ ಮತ್ತು ತೇಜಸ್ವಿನಿ ಅವರ 2017ರಲ್ಲಿ ಮದುವೆಯಾಗಿದ್ದರು. ದಂಪತಿಗೆ ಅವಳಿ ಮಕ್ಕಳು ಜನಿಸಿದ್ದರು. ದಾವಣಗೆರೆ ಮೂಲದ ದಂಪತಿ ಉದ್ಯೋಗದ ನಿಮಿತ್ತ ಬೆಂಗಳೂರಿಗೆ ಬಂದು ನೆಲೆಸಿದ್ದರು. 2023ರ ಜನವರಿ 10ರಂದು ಬೆಳಗ್ಗೆ 10 ಗಂಟೆಗೆ ಹೊರಮಾವುನಲ್ಲಿರುವ ತಮ್ಮ ಮನೆಯಿಂದ ಕಚೇರಿಗೆ ಪತ್ನಿ ಮತ್ತು ಮಕ್ಕಳೊಂದಿಗೆ ಲೋಹಿತ್ ಕುಮಾರ್ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ನಾಗವಾರದ ಹೆಚ್‌ಬಿಆರ್ ಬಡಾವಣೆಯ ವರ್ತುಲ ರಸ್ತೆಯ ಆ್ಯಕ್ಸಿಸ್ ಬ್ಯಾಂಕ್ ಮುಂದೆ ಪ್ರಯಾಣಿಸುತ್ತಿದ್ದಾಗ ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್ ದ್ವಿಚಕ್ರ ವಾಹನದ ಮೇಲೆ ಬಿದ್ದಿತ್ತು. ಘಟನೆಯಲ್ಲಿ ದ್ವಿಚಕ್ರ ವಾಹನದ ಹಿಂಬದಿ ಸವಾರರಾಗಿದ್ದ ಪತ್ನಿ ತೇಜಸ್ವಿನಿ ಮತ್ತು ಮಗ ವಿಹಾನ್ ಗಂಭೀರವಾಗಿ ಗಾಯಗೊಂಡಿದ್ದರು. ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಸಾವನ್ನಪ್ಪಿದ್ದರು. ಅರ್ಜಿದಾರರು ಮತ್ತು ಪುತ್ರಿ ಕೂಡ ಗಾಯಗೊಂಡಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ'' ಎಂದು ನ್ಯಾಯಪೀಠಕ್ಕೆ ವಿವರಿಸಿದ್ದರು.