ಬೆಂಗಳೂರು: ಆ್ಯಸಿಡ್ ದಾಳಿ ಪ್ರಕರಣದ ಸಂತ್ರಸ್ತರು, ಕೋವಿಡ್ ತುರ್ತು ಪರಿಸ್ಥಿತಿಯಲ್ಲಿ ಮೃತಪಟ್ಟ ಪೊಲೀಸ್ ಸಿಬ್ಬಂದಿಗಳ ಕುಟುಂಬಸ್ಥರೊಂದಿಗೆ ಹೊಸ ವರ್ಷ ಬರಮಾಡಿಕೊಳ್ಳುವ ಮೂಲಕ ಬೆಂಗಳೂರು ಪೊಲೀಸ್ ಇಲಾಖೆ ಮಾದರಿಯಾಗಿದೆ. ಪೊಲೀಸ್ ಕಮ್ಯಾಂಡ್ ಸೆಂಟರ್ ಹಾಗೂ ಸಿಎಆರ್ ಕಾರ್ಯಾಲಯದಲ್ಲಿ ಆ್ಯಸಿಡ್ ದಾಳಿ ಪ್ರಕರಣದ ಸಂತ್ರಸ್ತರು, ಕೋವಿಡ್ ತುರ್ತು ಪರಿಸ್ಥಿತಿಯಲ್ಲಿ ಮೃತಪಟ್ಟ ಪೊಲೀಸ್ ಸಿಬ್ಬಂದಿಗಳ ಕುಟುಂಬಸ್ಥರನ್ನು ಕರೆಸಿ ಹೊಸ ವರ್ಷಾಚರಣೆ ಆಚರಿಸಲಾಗಿದೆ.
ಈ ಸಂದರ್ಭದಲ್ಲಿ ಬೆಂಗಳೂರಿನ ಎಲ್ಲಾ ಪ್ರಜ್ಞಾವಂತ ನಾಗರೀಕರಿಗೂ ಹೊಸವರ್ಷದ ಶುಭಾಶಯ ಕೋರಿ ಮಾತನಾಡಿದ ನಗರ ಪೊಲೀಸ್ ಆಯುಕ್ತ ಬಿ ದಯಾನಂದ್, ''ಹೊಸ ವರ್ಷಕ್ಕೆ ಹಿರಿಯ ಅಧಿಕಾರಿಗಳಿಗೆ ಸಿಹಿ ಅಥವಾ ಹೂಗುಚ್ಛ ನೀಡಿ ಶುಭ ಕೋರುವುದು ಇಲಾಖೆಯಲ್ಲಿ ಹಿಂದಿನಿಂದಲೂ ಬಂದ ಸಾಂಪ್ರದಾಯಿಕ ಪದ್ಧತಿ. ಆದರೆ ಈ ಬಾರಿ ಅದರ ಬದಲು ಅನಾಥಾಶ್ರಮ, ವೃದ್ಧಾಶ್ರಮ, ವಿಶೇಷಚೇತನ ಮಕ್ಕಳಿಗೆ ತಮ್ಮ ಕೈಲಾದ ಸಹಾಯ ಮಾಡುವ ಮೂಲಕ ಅರ್ಥಪೂರ್ಣವಾಗಿ ಹೊಸ ವರ್ಷಾಚರಣೆ ಆಚರಿಸಲು ಸೂಚಿಸಲಾಗಿತ್ತು. ಅದರಂತೆ ಸಿಬ್ಬಂದಿಗಳು ಆಚರಿಸುತ್ತಿದ್ದಾರೆ'' ಎಂದರು.