ಬೆಂಗಳೂರು: ಕರ್ತವ್ಯ ನಿರ್ವಹಿಸುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ತಲೆಗೆ ಗಂಭೀರ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಟ್ರಾಫಿಕ್ ಎಎಸ್ಐ ನಾಗರಾಜ್ ಅವರ ಮಿದುಳು ನಿಷ್ಕ್ರಿಯಗೊಂಡಿದೆ. ಈ ಹಿನ್ನೆಲೆಯಲ್ಲಿ ಮೃತರ ಕುಟುಂಬಸ್ಥರು ಅಂಗಾಂಗ ದಾನಕ್ಕೆ ನಿರ್ಧರಿಸಿದ್ದಾರೆ.
ಹೈಗ್ರೌಂಡ್ಸ್ ಸಂಚಾರ ಪೊಲೀಸ್ ಠಾಣೆಯಲ್ಲಿ ಎಎಸ್ಐ ಆಗಿರುವ ನಾಗರಾಜ್ ಭಾನುವಾರ ಮಧ್ಯಾಹ್ನ ಸಂಜೆ 4 ಗಂಟೆ ವೇಳೆಗೆ ಚಾಲುಕ್ಯ ಸರ್ಕಲ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅರಮನೆ ರಸ್ತೆಯ ಸಿಐಡಿ ಕಡೆಯಿಂದ ಚಾಲುಕ್ಯ ವೃತ್ತಕ್ಕೆ ವೇಗವಾಗಿ ಬರುತ್ತಿದ್ದ ಆಟೋ ಏಕಾಏಕಿ ಇವರಿಗೆ ಡಿಕ್ಕಿಯಾಗಿದೆ. ತಲೆಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಇದೀಗ ಮಿದುಳು ಅವರ ನಿಷ್ಕ್ರಿಯಗೊಂಡಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.