ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆ ಕೆಲವೇ ತಿಂಗಳು ಇರುವಾಗಲೇ ರಾಜ್ಯ ರಾಜಕಾರಣದಲ್ಲಿ ಒಳ ರಾಜಕೀಯ ಆರಂಭವಾಗಿದೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷ ಬಿಜೆಪಿ ಹಾಗೂ ಕಾಂಗ್ರೆಸ್ ನಿಂದ ಸ್ಪರ್ಧಿಸಲು ಅವಕಾಶ ಸಿಗುವುದಿಲ್ಲ ಎಂದು ಖಾತ್ರಿಯಾಗಿರುವ ಹಲವು ಮುಖಂಡರು ಜೆಡಿಎಸ್ ಕಡೆ ಮುಖ ಮಾಡುತ್ತಿದ್ದಾರೆ.
ರಾಷ್ಟ್ರೀಯ ಪಕ್ಷಗಳಿಂದ ವಲಸೆ ಬರುವ ನಾಯಕರ ಜೊತೆ ಜೆಡಿಎಸ್ ನಾಯಕರು ಸಂಪರ್ಕದಲ್ಲಿದ್ದು, ಬೆಂಗಳೂರು ನಗರ ಜಿಲ್ಲೆ, ಬಳ್ಳಾರಿ, ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಯಲ್ಲಿ ಜೆಡಿಎಸ್ ನತ್ತ ಮುಖ ಮಾಡುತ್ತಿರುವ ರಾಜಕೀಯ ಪಕ್ಷಗಳ ನಾಯಕರು ಹೆಚ್ಚಾಗಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಕೆಲ ನಾಯಕರು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಜೊತೆ ಈಗಾಗಲೇ ಒಂದು ಸುತ್ತಿನ ಮಾತುಕತೆಯನ್ನು ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಜೆಡಿಎಸ್ ನ ಮಹತ್ವಾಕಾಂಕ್ಷೆಯ ಜನತಾ ಜಲಧಾರೆ, ಜನತಾ ಮಿತ್ರ ಹಾಗೂ ಪಂಚರತ್ನ ರಥಯಾತ್ರೆಯಿಂದ ಕೆಲವರು ಪ್ರಭಾವಿತರಾಗಿದ್ದು, ಪಂಚರತ್ನ ರಥಯಾತ್ರೆ ಸಂದರ್ಭದಲ್ಲಿ ರಾಷ್ಟ್ರೀಯ ಪಕ್ಷಗಳ ಮುಖಂಡರು ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂದಿವೆ ಮೂಲಗಳು ತಿಳಿಸಿವೆ.
ಜೆಡಿಎಸ್ಗೆ ಬರುವ ಮುಖಂಡರ ಹೆಸರು ಗೌಪ್ಯ: ಜೆಡಿಎಸ್ಗೆ ಬರುವ ಪ್ರಮುಖ ನಾಯಕರ ಹೆಸರುಗಳನ್ನು ಗೌಪ್ಯವಾಗಿ ಇಡಲಾಗಿದ್ದು, ಯಾವ ಜಿಲ್ಲೆಯಿಂದ ಯಾವ ನಾಯಕರು ಸೇರ್ಪಡೆಗೊಳ್ಳುತ್ತಾರೆ ಎಂಬುದು ಕುತೂಹಲ ಮೂಡಿಸಿದೆ. ಮೈಸೂರಿನಲ್ಲಿ ಇತ್ತೀಚೆಗೆ 126 ಅಭ್ಯರ್ಥಿಗಳೊಂದಿಗೆ ಕಾರ್ಯಾಗಾರ ನಡೆಸಿ 100ಕ್ಕೂ ಹೆಚ್ಚು ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗಿತ್ತು.