ಬೆಂಗಳೂರು:ವಿಧಾನಸಭೆ ಅಧಿವೇಶನದ ಕಡೆಯ ದಿನವಾದ ಇಂದು ಸದನದಲ್ಲಿ ಪಕ್ಷದ ಎಲ್ಲಾ ಶಾಸಕರು ಕಡ್ಡಾಯವಾಗಿ ಹಾಜರಿರುವಂತೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರಿಗೆ ವಿಪ್ ಜಾರಿಗೊಳಿಸಲಾಗಿದೆ.
ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷ ಕಾಂಗ್ರೆಸ್ ಅವಿಶ್ವಾಸ ನಿರ್ಣಯ ಮಂಡಿಸಿದ ಹಿನ್ನೆಲೆಯಲ್ಲಿ ನಿನ್ನೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಸಲಾಯಿತು. ಶಾಸಕಾಂಗ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಗರದ ಖಾಸಗಿ ಹೋಟೆಲ್ನಲ್ಲಿ ನಡೆದ ಸಭೆಯಲ್ಲಿ ಕೊರೊನಾ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಮತ್ತು ಹೋಂ ಕ್ವಾರಂಟೈನ್ ಆದ ಸಚಿವರು, ಶಾಸಕರನ್ನು ಹೊರತುಪಡಿಸಿ ಬಹುತೇಕ ಎಲ್ಲಾ ಶಾಸಕರು ಸಭೆಗೆ ಹಾಜರಾಗಿದ್ದರು.
ಖ್ಯಾತ ಹಿನ್ನೆಲೆ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ನಿಧನಕ್ಕೆ ಮೌನಾಚರಣೆ ಮೂಲಕ ಸಂತಾಪ ಸೂಚಿಸಿದ ನಂತರ ಶಾಸಕಾಂಗ ಪಕ್ಷದ ಸಭೆ ಆರಂಭಿಸಲಾಯಿತು. ಇಂದು ಸದನದಲ್ಲಿ ಯಾವ ರೀತಿ ಸರ್ಕಾರದ ಸಮರ್ಥನೆಗೆ ಶಾಸಕರು ನಿಲ್ಲಬೇಕು ಎನ್ನುವ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಕೆಲವು ಶಾಸಕರು ತಮ್ಮ ಅಹವಾಲುಗಳನ್ನು, ಸಣ್ಣಪುಟ್ಟ ಸಮಸ್ಯೆ ಇತ್ಯಾದಿಗಳನ್ನು ಹೇಳಿಕೊಂಡರು. ಬಳಿಕ ಎಲ್ಲವನ್ನು ಪರಿಶೀಲಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದರು.
ಅಂತಿಮವಾಗಿ ಇಂದು ಕಡ್ಡಾಯವಾಗಿ ಸದನದಲ್ಲಿ ಎಲ್ಲಾ ಶಾಸಕರು ಹಾಜರಿರುವಂತೆ ವಿಪ್ ಜಾರಿಗೊಳಿಸಲಾಯಿತು. ಬೆಳಗ್ಗೆ ಕಲಾಪ ಆರಂಭಗೊಂಡು ಕಲಾಪ ಮುಗಿಯುವವರೆಗೂ ಯಾರೂ ಕೂಡ ಸದನಕ್ಕೆ ಗೈರಾಗಬಾರದು. ಕಡ್ಡಾಯವಾಗಿ ಹಾಜರಿರಬೇಕು ಎಂದು ವಿಪ್ ಜಾರಿಗೊಳಿಸಲಾಯಿತು.
ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ವಿಧಾನ ಪರಿಷತ್ ಸದಸ್ಯರಾದ ಎಂಟಿಬಿ ನಾಗರಾಜ್, ಆರ್.ಶಂಕರ್, ಹೆಚ್.ವಿಶ್ವನಾಥ್, ಸಿ.ಪಿ.ಯೋಗೇಶ್ವರ್ ಶಾಸಕಾಂಗ ಪಕ್ಷದ ಸಭೆಯಿಂದ ದೂರ ಉಳಿದಿದ್ದರು. ಇನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಹ್ವಾನದ ಮೇರೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಶಾಸಕಾಂಗ ಸಭೆಯಲ್ಲಿ ಪಾಲ್ಗೊಂಡಿದ್ದರು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಯಿತು.