ಕರ್ನಾಟಕ

karnataka

ಹುರಿಯಾಳುಗಳ ಅಂತಿಮ ಪಟ್ಟಿಗೆ ದಿಲ್ಲಿಯಲ್ಲಿಂದು ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆ

ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಅಂತಿಮಗೊಳಿಸಲಿದೆ. ದಿಲ್ಲಿಯಲ್ಲಿ ಪ್ರಧಾನಿ ಮೋದಿ, ಅಮಿತ್​, ನಡ್ಡಾ ನೇತೃತ್ವದಲ್ಲಿ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದೆ.

By

Published : Apr 9, 2023, 11:35 AM IST

Published : Apr 9, 2023, 11:35 AM IST

ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆ
ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆ

ನವದೆಹಲಿ:ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್​ ಮತ್ತು ಜೆಡಿಎಸ್​ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಇಂದು ಆಡಳಿತಾರೂಢ ಬಿಜೆಪಿ ತನ್ನ ಹುರಿಯಾಳುಗಳನ್ನು ಅಂತಿಮಗೊಳಿಸಲಿದೆ. ದಿಲ್ಲಿಯಲ್ಲಿಂದು ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಅಂತಿಮ ಪಟ್ಟಿ ಸಿದ್ಧವಾಗಲಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಸೇರಿದಂತೆ ಸಮಿತಿಯ ಸದಸ್ಯರು ಭಾಗವಹಿಸಲಿದ್ದಾರೆ.

ಇದಕ್ಕೂ ಮುನ್ನ ಶನಿವಾರದಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರ ನಿವಾಸದಲ್ಲಿ ಅಮಿತ್​ ಶಾ ಸಭೆ ನಡೆಸಿ ಅಭ್ಯರ್ಥಿಗಳ ಪಟ್ಟಿಯ ಬಗ್ಗೆ ಚರ್ಚಿಸಿದರು. ಈ ವೇಳೆ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಕೇಂದ್ರ ಸಚಿವ ಮನ್ಸುಖ್ ಮಾಂಡವೀಯಾ ಮತ್ತಿತರ ನಾಯಕರು ಉಪಸ್ಥಿತರಿದ್ದರು.

ರಾಜ್ಯ ಬಿಜೆಪಿಯ ಕೋರ್ ಕಮಿಟಿ ಪ್ರತಿ ವಿಧಾನಸಭಾ ಸ್ಥಾನಕ್ಕೆ ಮೂವರು ಸ್ಪರ್ಧಾಕಾಂಕ್ಷಿಗಳನ್ನು ಶಾರ್ಟ್‌ಲಿಸ್ಟ್ ಮಾಡಿದೆ. ಅದನ್ನು ಕೇಂದ್ರ ಚುನಾವಣಾ ಸಮಿತಿಯ ಮುಂದೆ ಇಡಲಾಗುವುದು. ಕೇಂದ್ರ ಚುನಾವಣಾ ಸಮಿತಿಯಲ್ಲಿ ಅಭ್ಯರ್ಥಿಯ ಅಂತಿಮ ಘೋಷಣೆಯಾಗಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಏಪ್ರಿಲ್ 4 ರಂದು ಕರ್ನಾಟಕದಲ್ಲಿ ಬಿಜೆಪಿಯ ಕೋರ್ ಕಮಿಟಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್, ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್, ಸಹ-ಪ್ರಭಾರಿ ಮನ್ಸುಖ್ ಮಾಂಡವೀಯಾ, ಕೇಂದ್ರ ಚುನಾವಣಾ ಸಮಿತಿ ಸದಸ್ಯ ಅಣ್ಣಾಮಲೈ, ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಸಭೆ ನಡೆಸಿ ಅಭ್ಯರ್ಥಿಗಳ ಕಿರು ಪಟ್ಟಿಯನ್ನು ರೂಪಿಸಿದರು.

ಎಲೆಕ್ಷನ್​ ಮಾಹಿತಿ:ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನಗಳನ್ನು ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಕಾಂಗ್ರೆಸ್ 80 ಮತ್ತು ಜೆಡಿಎಸ್ 37 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಮಾರ್ಚ್​ 29 ರಂದು ಮಾಧ್ಯಮಗೋಷ್ಟಿ ನಡೆಸಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಕರ್ನಾಟಕ ವಿಧಾನಸಭೆಯ 224 ಸ್ಥಾನಗಳಿಗೆ ಮೇ 10 ರಂದು ಮತದಾನ, ಮೇ 13ರಂದು ಮತ ಎಣಿಕೆ ನಡೆಯಲಿದೆ ಎಂದು ತಿಳಿಸಿದ್ದರು. ಪ್ರಸ್ತುತ ವಿಧಾನಸಭೆಯ ಅವಧಿ ಮೇ 24 ರಂದು ಕೊನೆಗೊಳ್ಳಲಿದೆ.

ಬಿಜೆಪಿ ಸ್ಟಾರ್​ ಪ್ರಚಾರಕರು:ಕರ್ನಾಟಕಕ್ಕೆ 40 ಸ್ಟಾರ್ ಪ್ರಚಾರಕರ ಹೆಸರನ್ನು ಸೂಚಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಗೋವಾ ಸಿಎಂ ಪ್ರಮೋದ್ ಸಾವಂತ್, ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಸ್ಮೃತಿ ಇರಾನಿ, ನಿರ್ಮಲಾ ಸೀತಾರಾಮನ್ ಅವರನ್ನು ಸ್ಟಾರ್​ ಪ್ರಚಾರಕ ಪಟ್ಟಿಯಲ್ಲಿ ಸೇರಿಸಲಾಗಿದೆ. ಎಲ್ಲರೂ ರಾಜ್ಯದಲ್ಲಿ ಎರಡು ವಾರಗಳು ಪ್ರಚಾರ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ಕಾಂಗ್ರೆಸ್​, ಜೆಡಿಎಸ್​ ಪಟ್ಟಿ:ಇತ್ತ ಕಾಂಗ್ರೆಸ್​ ತನ್ನ ಹುರಿಯಾಳುಗಳ 2 ಹಂತದ ಪಟ್ಟಿಯನ್ನು ಬಿಡುಗಡೆ ಮಾಡಿದೆ. 124 ಅಭ್ಯರ್ಥಿಗಳುಳ್ಳ ಮೊದಲ ಪಟ್ಟಿಯಲ್ಲಿ ಬಿಡುಗಡೆ ಮಾಡಲಾಗಿತ್ತು. ಎರಡನೇ ಪಟ್ಟಿಯಲ್ಲಿ 42 ಅಭ್ಯರ್ಥಿಗಳನ್ನು ಘೋಷಿಸಿತ್ತು. ಜೆಡಿಎಸ್​ ತಿಂಗಳ ಹಿಂದೆಯೇ 93 ಅಭ್ಯರ್ಥಿಗಳ ಪಟ್ಟಿಯನ್ನು ರಿಲೀಸ್ ಮಾಡಿದ್ದು, ಇಂದು ಅಥವಾ ನಾಳೆ 2ನೇ ಪಟ್ಟಿಯನ್ನು ಘೋಷಿಸಲಿದೆ ಎಂದು ನಿರೀಕ್ಷಿಸಲಾಗಿದೆ.

ಓದಿ:ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಬಿ ಎನ್ ಚಂದ್ರಪ್ಪ ನೇಮಕ

ABOUT THE AUTHOR

...view details