ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯನ್ನು ಪ್ರತಿಷ್ಠೆಯನ್ನಾಗಿ ಪರಿಗಣಿಸಿರುವ ಬಿಜೆಪಿ ಹೈಕಮಾಂಡ್ ಸರಣಿಯಾಗಿ ವರಿಷ್ಠ ನಾಯಕರನ್ನು ರಾಜ್ಯಕ್ಕೆ ಕಳುಹಿಸಿಕೊಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ನಂತರ ಇದೀಗ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ರಾಜ್ಯ ಪ್ರವಾಸಕ್ಕೆ ಆಗಮಿಸುತ್ತಿದ್ದಾರೆ. 2 ದಿನ ಅವರು ರಾಜ್ಯ ಪ್ರವಾಸ ನಡೆಸಲಿದ್ದಾರೆ.
ನಡ್ಡಾ ಪ್ರವಾಸದ ವಿವರ: ನಡ್ಡಾ ರಾಜ್ಯಕ್ಕೆ ಭೇಟಿ ನೀಡುವ ಕುರಿತು ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಮಾಹಿತಿ ನೀಡಿದ್ದಾರೆ. ಇಂದು ರಾತ್ರಿ ಮಂಗಳೂರಿಗೆ ಆಗಮಿಸಿ ಅಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ಫೆ. 20ರಂದು ಬೆಳಗ್ಗೆ ಉಡುಪಿಯಲ್ಲಿ ಬೂತ್ ಮಟ್ಟದ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ನಂತರ, ಮಧ್ಯಾಹ್ನ ಬೈಂದೂರಿನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಸಂಜೆ ಕೊಪ್ಪದಲ್ಲಿ ಅಡಿಕೆ ಬೆಳೆಗಾರರ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದು, ನಂತರ ಶೃಂಗೇರಿಯಲ್ಲಿ ಜನಪ್ರತಿನಿಧಿಗಳ ಸಭೆಯಲ್ಲಿ ಭಾಗಿಯಾಗುವರು.
ಫೆ.21ರಂದು ಬೆಳಗ್ಗೆ ಚಿಕ್ಕಮಗಳೂರಿನಲ್ಲಿ ಪ್ರಬುದ್ಧರ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ ಬೇಲೂರಿನ ಸಾರ್ವಜನಿಕ ಸಭೆಯಲ್ಲಿ ಭಾಷಣ ಮಾಡಲಿದ್ದಾರೆ. ಸಂಜೆ ಹಾಸನದ ಬೂತ್ ಮಟ್ಟದ ಸಮಾವೇಶಗಳಲ್ಲಿ ಪಾಲ್ಗೊಳ್ಳಲಿದ್ದು ರಾತ್ರಿ ಬೆಂಗಳೂರಿಗೆ ಆಗಮಿಸಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ವಾಪಸ್ ಆಗಲಿದ್ದಾರೆ.
ಎರಡು ತಿಂಗಳಿನಲ್ಲಿ ನಾಲ್ಕು ಬಾರಿ ಪ್ರಧಾನಿ ನರೇಂದ್ರ ಮೋದಿ ಹಾಗೂ 5 ಬಾರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯ ಪ್ರವಾಸಕ್ಕೆ ಆಗಮಿಸಿ ಹಳೆ ಮೈಸೂರು ಭಾಗ, ಕಲ್ಯಾಣ ಕರ್ನಾಟಕದಲ್ಲಿ ಸಂಚಲನ ಮೂಡಿಸಿದ್ದಾರೆ. ಇದೀಗ ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಸರದಿ. ಕರಾವಳಿ ಮತ್ತು ಮಲೆನಾಡು ಭಾಗವನ್ನು ಕೇಂದ್ರವಾಗಿರಿಸಿಕೊಂಡು ಎರಡು ದಿನ ಪಕ್ಷದ ಪರ ಬಿರುಸಿನ ಪ್ರಚಾರ ನಡೆಸಿ ಕಾರ್ಯಕರ್ತರನ್ನು ಹುರಿದುಂಬಿಸಲಿದ್ದಾರೆ.