ಬೆಂಗಳೂರು :ಲೋಕಸಭೆ ಚುನಾವಣೆ ಹಾಗೂ ಪಕ್ಷದಲ್ಲಿ ಇತ್ತೀಚಿಗೆ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ಚರ್ಚಿಸುವ ಸಂಬಂಧ ಇಂದು ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆ ಕರೆಯಲಾಗಿತ್ತು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ಆರಂಭಗೊಂಡಿದೆ.
ಈ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್, ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ, ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ರಾಜ್ಯದ ಮಾಜಿ ಸಚಿವರಾದ ಗೋವಿಂದ ಕಾರಜೋಳ, ಕೆ.ಎಸ್. ಈಶ್ವರಪ್ಪ, ಆರ್. ಅಶೋಕ್, ಡಾ. ಸಿ.ಎನ್. ಅಶ್ವತ್ಥ ನಾರಾಯಣ, ಬಿ. ಶ್ರೀರಾಮುಲು, ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾಣಾ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ ಅವರು ಭಾಗವಹಿಸಿದ್ದಾರೆ.
ಪಕ್ಷ ಸಂಘಟನೆ, ಎಸ್ಟಿ ಸೋಮಶೇಖರ್ ಪಕ್ಷ ಬಿಡುವ ವಿಚಾರ, ಬಿಜೆಪಿಯಲ್ಲಿ ನಡೆಯುತ್ತಿರುವ ಗೊಂದಲ ಹಾಗೂ ಲೋಕಸಭೆ ಚುನಾವಣೆಗೆ ಸಿದ್ಧತೆ ಮತ್ತಿತರ ವಿಷಯಗಳ ಬಗ್ಗೆ ಸಭೆಯಲ್ಲಿ ಸಮಾಲೋಚನೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.
ಇತ್ತಿಚೇಗೆ ಡಿವಿ ಸದಾನಂದಗೌಡ ಹೇಳಿದ್ದು ಹೀಗೆ: ಆಪರೇಷನ್ ಹಸ್ತ ವಿಚಾರಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಿವಿ ಸದಾನಂದಗೌಡ ಅವರು ಕಿಡಿಕಾರಿದ್ದರು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸಮುದ್ರದ ಮೇಲೆ ಕಲ್ಲೆಸೆಯುವ ಕೆಲಸ ಮಾಡ್ತಿದಾರೆ ಎಂದು ವಾಗ್ದಾಳಿ ನಡೆಸಿದ್ದರು.